ನಾಳೆ ಕಲಬುರಗಿ ಸಂಪುಟ ಸಭೆ | ದಶಕದ ಬಳಿಕ ನಡೆಯುವ ಸಭೆಗೆ ನಿರೀಕ್ಷೆಗಳ ಭಾರ
ಬರೋಬ್ಬರಿ ಹತ್ತು ವರ್ಷಗಳ ಬಳಿಕ ಗುರುವಾರ(ಸೆ.17) ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚಿಸಲು ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ.
ಬರೋಬ್ಬರಿ ಹತ್ತು ವರ್ಷಗಳ ಬಳಿಕ ಗುರುವಾರ(ಸೆ.17) ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚಿಸಲು ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ.
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿ, ಬಿಟಿ, ಶಿಕ್ಷಣ, ನೀರಾವರಿ ಮತ್ತಿತರ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಈ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸೋಮವಾರ ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಆಶಯದೊಂದಿಗೆ ನಮ್ಮ ಸರ್ಕಾರ, ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಹತ್ತು ವರ್ಷಗಳ ಹಿಂದೆಯೂ 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಂಪುಟ ಸಭೆ ನಡೆಸಿದ್ದರು. ಇದೀಗ ಮತ್ತೆ ಅವರದೇ ನೇತೃತ್ವದಲ್ಲಿ ಸಂಪುಟ ಸಭೆ ನಡೆಯುತ್ತಿದೆ ಎಂದರು.
ರಾಜ್ಯಮಟ್ಟದಲ್ಲಿ ಆರ್ಥಿಕ ಇಲಾಖೆಯ ಹಲವು ಪ್ರಸ್ತಾಪಗಳಿಗೆ ಒಪ್ಪಿಗೆ ಸಿಗಲಿದೆ. ಹಾಗೇ ವಿಶೇಷವಾಗಿ ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರಸ್ತಾವನೆಗಳೂ ಚರ್ಚೆಗೆ ಬರಲಿವೆ. ಜಲ ಸಂಪನ್ಮೂಲ ಸಚಿವರು ತಮ್ಮ ಅಮೆರಿಕ ಪ್ರವಾಸ ಮೊಟಕುಗೊಳಿಸಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ವಾಪಸ್ಸಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ಗುಜರಾತ್ ಪ್ರವಾಸದಲ್ಲಿರುವುದರಿಂದ ಮುಖ್ಯಮಂತ್ರಿಗಳ ಅನುಮತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸಚಿವರೂ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಿಯಾಂಕ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಇದ್ದರು.
ದಶಕದ ಬಳಿಕ ಮತ್ತೆ ಸಿದ್ದರಾಮಯ್ಯ ಸಂಪುಟ ಸಭೆ
ಕಳೆದ ಒಂದು ದಶಕದ ಹಿಂದೆ 2014ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೀಗ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮತ್ತೊಂದು ಸಂಪುಟ ಸಭೆ ನಡೆಯುತ್ತಿದೆ.
ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಸಭೆ ನಡೆಯಲಿರುವ ಮಿನಿ ವಿಧಾನಸೌಧ ಕಟ್ಟಡಕ್ಕೆ ಬಣ್ಣ ಹಚ್ಚುವುದರ ಜೊತೆಗೆ ಗ್ರಿಲ್, ಗೇಟ್ಗಳಿಗೆ ಬಣ್ಣ ಬಳಿಲಾಗುತ್ತಿದೆ. ಆವರಣದಲ್ಲಿ ಡಾಂಬರೀಕರಣ ಸಹ ಮಾಡಲಾಗುತ್ತಿದೆ. ಇನ್ನೂ ಸಭೆ ನಡೆಯುವ ಸ್ಥಳ, ಪ್ರಾದೇಶಿಕ ಆಯುಕ್ತರ ಸಭಾಂಗಣಕ್ಕೆ ಹೈಟೆಕ್ ಟಚ್ ನೀಡಲಾಗುತ್ತಿದೆ.
ಹಿಂದಿನ ಸಭೆಗಳ ಇತಿಹಾಸ
ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಅವಧಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಅವರ ಅವಧಿಯಲ್ಲಿ ಎರಡನೇ ಬಾರಿಗೆ ಸಚಿವ ಸಂಪುಟ ಸಭೆ ನಡೆದಿತ್ತು.
ಆ ಬಳಿಕ 2014ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.