ಎಸಿ, ಡಿಸಿ ಕೋರ್ಟ್ನಲ್ಲಿ ಪ್ರಕರಣ ಬಾಕಿ: ಸಿಎಂ ಸಿದ್ದರಾಮಯ್ಯ ತರಾಟೆ
ಕಂದಾಯ ನ್ಯಾಯಾಲಯಗಳಿಗೆ ಅಗತ್ಯವಿದ್ದರೆ ಹೆಚ್ಚುವರಿ ಉಪವಿಭಾಗಧಿಕಾರಿ ಹಾಗೂ ಜಿಲ್ಲಾಧಿಕಾರಿಗಳನ್ನು ಕೊಡಬಹುದು. ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಆದೇಶಿಸಲಾಗಿದೆ.;
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಎರಡು ಜಿಲ್ಲೆಗಳಲ್ಲಿ ಮಾತ್ರ ಉಪ ವಿಭಾಗಧಿಕಾರಿ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಉಳಿದಿದ್ದು ಶೀಘ್ರವೇ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.
ಶುಕ್ರವಾರ(ಮೇ30)ದಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೂರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಹಶೀಲ್ದಾರ್, ಉಪವಿಭಾಗಧಿಕಾರಿ ಹಾಗೂ ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಪ್ರಕರಣಗಳು ಶೀಘ್ರ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.
"Justice delayed is justice denied "ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು. ಅಗತ್ಯವಿದ್ದರೆ ಹೆಚ್ಚುವರಿ ಉಪವಿಭಾಗಧಿಕಾರಿ ಹಾಗೂ ಜಿಲ್ಲಾಧಿಕಾರಿಗಳನ್ನು ಕೊಡಬಹುದು. ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಹಾಗೂ ಜೇಷ್ಠತೆ ಆಧಾರದ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು ಎಂದು ತಿಳಿಸಿದರು.
ಮಳೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ 1,000 ಕೋಟಿಗಿಂತಲೂ ಅಧಿಕ ಹಣ ಲಭ್ಯವಿದೆ. ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ತಕ್ಷಣ ಪರಿಹಾರ ಒದಗಿಸಬೇಕು ಎಂದರು.
ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು. ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ 1,20 ಲಕ್ಷ ರೂಗಳನ್ನು ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು. ಅತಿವೃಷ್ಟಿ, ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.
ಅನರ್ಹ ಪಡಿತರ ಚೀಟಿಗಳು ಹೇಗೆ ಉಳಿದುಕೊಂಡಿವೆ
ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.
ಒತ್ತುವರಿ ತೆರವಿಗೆ ನಿರ್ದೇಶನ
ಅರಣ್ಯ ಹಕ್ಕುಗಳಿಗಾಗಿ 2,95,176 ಅರ್ಜಿಗಳು ಸಲ್ಲಿಕೆಯಾಗಿದ್ದು, 16,700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇವುಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನಿನ ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ. 95ರಷ್ಟು ಪೂರ್ಣಗೊಂಡಿದ್ದು 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದ್ದು ತೆರವುಗೊಳಿಸಬೇಕು. ಬಗರ್ಹುಕಂ ನಡಿ 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದೆ. ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.
ಭೂಮಿ ಹಂಚಿಕೆಗೆ ತಾಕೀತು
ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ತಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ಆದ್ಯತೆ ಮೇರೆಗೆ ಒದಗಿಸಬೇಕು. 1,858 ಗ್ರಾಮೀಣ ಅಂಗನವಾಡಿಗಳಿಗೆ ಹಾಗೂ 5,187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜುಗಳಿಗೆ ನಿವೇಶನ ಹಂಚಿಕೆಯಾಗಿಲ್ಲ. ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು. ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಜ್ಯದಲ್ಲಿ ಈ ವರ್ಷ 1,395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದರು.