Caste Census | ಕಾಲಮಿತಿಯಲ್ಲಿ ಜಾತಿವಾರು ಜನಗಣತಿ ಮುಗಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಕೇಂದ್ರ ಸರ್ಕಾರ ಗಣತಿಗೆ ಯಾವುದೇ ಕಾಲಮಿತಿ ಪ್ರಕಟಿಸಿಲ್ಲ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಆತುರದಲ್ಲಿ ನಿರ್ಧಾರ ಕೈಗೊಂಡಿದೆ. ಜಾತಿವಾರು ಜನಗಣತಿಯನ್ನು ನಿರ್ದಿಷ್ಟ ಸಮಯದೊಳಗೆ ಮುಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದರು.;

Update: 2025-05-01 09:05 GMT

ಕೇಂದ್ರ ಸರ್ಕಾರ ಜಾತಿವಾರು ಜನಗಣತಿ ಜೊತೆಗೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿ ಜೊತೆಗೆ ಜಾತಿಗಣತಿ ನಡೆಸುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜಾತಿಗಣತಿ ನಡೆಸುವಂತೆ ಎರಡೂವರೆ ವರ್ಷದಿಂದ ಪದೇ ಪದೆ ಒತ್ತಡ ಹಾಕಿದ್ದರಿಂದ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರ ಗಣತಿಗೆ ಯಾವುದೇ ಕಾಲಮಿತಿ ಪ್ರಕಟಿಸಿಲ್ಲ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಆತುರದಲ್ಲಿ ನಿರ್ಧಾರ ಕೈಗೊಂಡಿದೆ. ಜಾತಿವಾರು ಜನಗಣತಿಯನ್ನು ನಿರ್ದಿಷ್ಟ ಸಮಯದೊಳಗೆ ಮುಗಿಸಬೇಕು ಎಂದು ಒತ್ತಾಯಿಸಿದರು.

ಖಾಸಗಿ ಸಂಸ್ಥೆಗಳಲ್ಲಿ ಹಿಂದುಳಿದ ಹಾಗೂ ಪರಿಶಿಷ್ಟರಿಗೆ ಶಿಕ್ಷಣ, ಉದ್ಯೋಗ ಮೀಸಲಾತಿ ಒದಗಿಸಬೇಕು. ಇತರೆ ಹಿಂದುಳಿದ ಹಾಗೂ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು. ರಾಜ್ಯ ಸರ್ಕಾರ 2015ರಲ್ಲೇ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಆ ವರದಿಯು ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಸಚಿವರ ಅಭಿಪ್ರಾಯ ಆಧರಿಸಿ ವರದಿ ಜಾರಿಗೆ ನಿರ್ಧರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿಯವರು ಮೊದಲಿನಿಂದಲೂ ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಡೆಸಿದ ವಿವಿಧ ಆಯೋಗಗಳ ಸಮೀಕ್ಷೆಗಳನ್ನು ಬಿಜೆಪಿಯವರು ಒಪ್ಪಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags:    

Similar News