ಜಾತಿಗಣತಿ | ಪಡಿತರ ಚೀಟಿ ರದ್ದತಿಯ ತಪ್ಪುಕಲ್ಪನೆ ಬೇಡ- ಸಮೀಕ್ಷೆಗೆ ದತ್ತಾಂಶ ಒದಗಿಸಿ- ಡಿಸಿ ಜಗದೀಶ್ ಮನವಿ
"ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಹಿಂದುಳಿದ ವರ್ಗಗಳೊಂದಿಗೆ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶ ಸಂಗ್ರಹಿಸುವ ಉದ್ದೇಶ ಹೊಂದಿದೆ. ಹಾಗಾಗಿ ಯಾರೂ ಕೂಡ ಆತಂಕಪಡಬೇಕಾಗಿಲ್ಲ" ಎಂದು ಡಿಸಿ ಜಗದೀಶ್ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಗಣತಿದಾರರು ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಬರುತ್ತಿದ್ದಾರೆಂಬ ತಪ್ಪುಕಲ್ಪನೆಯಿಂದ ಕೆಲವರು ಸರಿಯಾದ ಮಾಹಿತಿ ನೀಡುತ್ತಿಲ್ಲ. ಇದು ಸಂಪೂರ್ಣ ವದಂತಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
"ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಹಿಂದುಳಿದ ವರ್ಗಗಳೊಂದಿಗೆ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶ ಸಂಗ್ರಹಿಸುವ ಉದ್ದೇಶ ಹೊಂದಿದೆ. ಹಾಗಾಗಿ ಯಾರೂ ಕೂಡ ಆತಂಕಪಡಬೇಕಾಗಿಲ್ಲ" ಎಂದು ಹೇಳಿದ್ದಾರೆ.
"ಸಮೀಕ್ಷೆಗೂ, ಪಡಿತರ ಚೀಟಿ ರದ್ದತಿಗೆ ಯಾವುದೇ ಸಂಬಂಧ ಇಲ್ಲ. ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆ ಹೋಗಲಾಡಿಸಲು ಹಾಗೂ ಯೋಜನೆಗಳನ್ನು ರೂಪಿಸುವ ಸಲುವಾಗಿ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಯಾವುದೇ ತಪ್ಪು ಕಲ್ಪನೆ ಹೊಂದದೆ, ವದಂತಿಗಳಿಗೆ ಕಿವಿ ಕೊಡದೇ, ನಿಶ್ಚಿಂತೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸಿ. ನಿಮ್ಮ ಸಹಕಾರದಿಂದಲೇ ಸಮೀಕ್ಷೆಯನ್ನು ಯಶಸ್ವಿಗೊಳಿಸಬಹುದು” ಎಂದು ಹೇಳಿದ್ದಾರೆ.
ಜಾತಿಗಣತಿ ಸಮೀಕ್ಷೆಯಲ್ಲಿ ಮಾಹಿತಿ ಸೋರಿಕೆಯ ಆತಂಕವಿದ್ದು, ಯಾರೂ ಕೂಡ ಗಣತಿದಾರರಿಗೆ ಮಾಹಿತಿ ನೀಡಬಾರದು. ಇದರಿಂದ ಹಿಂದುಳಿದ ವರ್ಗಗಳಿಗೆ ಮಾತ್ರ ಅನುಕೂಲವಾಗಲಿದೆ. ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ಉಪಯೋಗವಿಲ್ಲ. ಹಾಗಾಗಿ ಸಮುದಾಯದವರು ಸಮೀಕ್ಷೆಯಲ್ಲಿ ಮಾಹಿತಿ ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ವಕೀಲ ಬಿ.ವಿ.ಆಚಾರ್ಯ ಹೇಳಿದ್ದಾರೆ.
ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಅವರು ಕೂಡ ಸಮೀಕ್ಷೆ ವಿರೋಧಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಸಮೀಕ್ಷೆಯು ಯಾವುದೇ ಜಾತಿ-ಧರ್ಮಗಳಿಗೆ ಸೀಮಿತವಾಗಿಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಹೇಳಿದ್ದರು.