ಡಿಕೆಶಿ ಅಕ್ರಮ ಆಸ್ತಿ ಪ್ರಕರಣ | ತನಿಖಾ ಒಪ್ಪಿಗೆ ಹಿಂಪಡೆದ ಕ್ರಮ ಪ್ರಶ್ನಿಸಿ ಸುಪ್ರೀಂಗೆ ಸಿಬಿಐ ಮೇಲ್ಮನವಿ
2019ರಲ್ಲಿ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಆದರೆ, ಸಿಬಿಐ ತನಿಖೆಗೆ ಒಪ್ಪಿಸಿದ ಕ್ರಮ ಕಾನೂನುಬಾಹಿರ ಎಂಬ ಕಾರಣ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಜೂರಾತಿ ಹಿಂಪಡೆದಿತ್ತು.;
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ (ಡಿಎ) ಪ್ರಕರಣದ ತನಿಖೆಗೆ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಒಪ್ಪಿಗೆ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಕಳೆದ ಸೆ.26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಯ ಮುಕ್ತ ಅನುಮತಿ ಹಿಂಪಡೆಯುವ ನಿರ್ಧಾರ ಕೈಗೊಂಡಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಹಿನ್ನಡೆಯಾಗಿದೆ ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
2019ರ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಆದರೆ, ಸಿಬಿಐ ತನಿಖೆಗೆ ಒಪ್ಪಿಸಿದ ಬಿಜೆಪಿ ಸರ್ಕಾರದ ಕ್ರಮ ಕಾನೂನುಬಾಹಿರ ಎಂಬ ಕಾರಣ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಜೂರಾತಿ ಹಿಂಪಡೆದಿತ್ತು.
ಬದಲಿಗೆ ಪ್ರಕರಣದ ತನಿಖೆಯನ್ನು 2023 ಡಿ. 26 ರಂದು ರಾಜ್ಯ ಸರ್ಕಾರ ಲೋಕಾಯುಕ್ತ ತನಿಖೆಗೆ ಒಪ್ಪಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ 2024 ಆಗಸ್ಟ್ 29 ರಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿಯನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಹೈಕೋರ್ಟ್ ಅರ್ಜಿ ವಜಾ ಮಾಡಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಯತ್ನಾಳ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. 2024 ಸೆ. 17 ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಯತ್ನಾಳ್ ಮನವಿಯ ಮೇರೆಗೆ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತರಿಗೆ ನೋಟಿಸ್ ಜಾರಿ ಮಾಡಿತ್ತು. ಅರ್ಜಿಯ ಸಂಬಂಧ ಸಿಬಿಐ ಪ್ರತಿಕ್ರಿಯೆಯನ್ನೂ ಕೇಳಿತ್ತು. ಪ್ರತಿಕ್ರಿಯೆ ದಾಖಲಿಸಲು ಮೂರು ವಾರಗಳ ಗಡುವು ನೀಡಿ ವಿಚಾರಣೆ ಮುಂದೂಡಿತ್ತು. ಈಗ ತನಿಖಾ ಸಂಸ್ಥೆಯೇ ಮೇಲ್ಮನವಿ ಸಲ್ಲಿಸಿರುವುದರಿಂದ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪ್ರಕರಣದ ಹಿನ್ನೆಲೆ
ಡಿ.ಕೆ. ಶಿವಕುಮಾರ್ ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಗೆ ನಿರ್ಧಾರವನ್ನು 2023ರ ನ.23ರಂದು ರಾಜ್ಯ ಸರ್ಕಾರ ಹಿಂಪಡೆದಿತ್ತು. ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು.
2013 ಮತ್ತು 2018ರ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಆದಾಯ ಮೀರಿ 74.93 ಕೋಟಿ ರೂ. ಆದಾಯ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು ಡಿ.ಕೆ. ಶಿವಕುಮಾರ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಹೇಳಿತ್ತು. 2017ರಲ್ಲಿ ಆದಾಯ ತೆರಿಗೆ ಇಲಾಖೆಯು ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದ 70 ಸ್ಥಳಗಳಲ್ಲಿ ಶೋಧ ನಡೆಸಿತ್ತು. 2020ರಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿತ್ತು.
2017 ಮತ್ತು 2019 ರ ನಡುವೆ ಆದಾಯ ತೆರಿಗೆ ಇಲಾಖೆಯು ಅಕ್ರಮ ಹಣ ಸಾಗಣೆ ಆರೋಪ ಹೊರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರನ್ನು 2019 ಸೆಪ್ಟೆಂಬರ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅಕ್ಟೋಬರ್ ತಿಂಗಳಲ್ಲಿ ಜಾಮೀನಿನ ಮೇಲೆ ಡಿಕೆಶಿ ಬಿಡುಗಡೆಯಾಗಿದ್ದರು.