ಸಿ.ಡಿ.ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ: ಡಿ.ಕೆ.ಶಿವಕುಮಾರ್ ಟೀಕೆಗೆ ಎಚ್‌ಡಿಕೆ ತಿರುಗೇಟು
ಹಾಸನ ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಪ್ರಶ್ನಿಸುವ ಮುನ್ನ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಬಹಿರಂಗಪಡಿಸಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ;
ಹಾಸನ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ವಾಕ್ಸಮರ ಆರಂಭವಾಗಿದೆ. ಹಾಸನ ಜಿಲ್ಲೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಕೊಡುಗೆ ಪ್ರಶ್ನಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರ ಕೊಡುಗೆ ಏನು ಎಂದು ಮರು ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಜನ ಕಲ್ಯಾಣ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಜಿಲ್ಲೆಗೆ ದೇವೇಗೌಡರ ಕೊಡುಗೆಯನ್ನೂ ಪ್ರಶ್ನಿಸಿದ್ದರು. ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಪ್ರಶ್ನಿಸುವ ಮುನ್ನ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಬಹಿರಂಗಪಡಿಸಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಹರದನಹಳ್ಳಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರದ್ದು ಎಂತಹ ಕೊಡುಗೆ ಎಂಬುದು ಗೊತ್ತಿದೆ. ಸಿ.ಡಿ, ಪೆನ್‌ಡ್ರೈವ್ ಹಂಚಿದರಲ್ಲಾ, ಅದೇ ಅವರ ದೊಡ್ಡ ಸಾಧನೆ. ಅದನ್ನು ಬಿಟ್ಟರೆ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ ಏನಿದೆ ಎಂದು ಪ್ರಶ್ನಿಸಿದ್ದಾರೆ.
ಇಂದು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ಅದು ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಮಾತ್ರ. ನಾನು ನನ್ನದೇ ಆದ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ. ಈವರೆಗೂ ಹಾಸನದ ಫ್ಲೈ ಓವರ್ ಕಾಮಗಾರಿ ಮುಗಿಸಲು ಇವರಿಂದ ಸಾಧ್ಯವಾಗಿಲ್ಲ. ಇದೇ ಇವರ ಯೋಗ್ಯತೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ದೇವೇಗೌಡರ ಕುಟುಂಬ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದ್ದರೆ ತೋರಿಸಬಹುದಿತ್ತು ಎಂದು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನಾಯಕರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ಆದರೆ, ನಾವು ಎಲ್ಲಿಂದ ಅಂತಹ ಲೂಟಿ ಮಾಡಿಲ್ಲ. ನಾವು ಎಲ್ಲಿಂದ ಅಂತಹ ಸಾಕ್ಷಿ ಗುಡ್ಡೆನಾ ತರೋಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಗೆ ದೇವೇಗೌಡ ಕೊಡುಗೆ ಏನು ಎಂದು ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಈಚೆಗೆ ಜೆಡಿಎಸ್ ಶಾಸಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಕೂಡ ವಾಗ್ದಾಳಿ ನಡೆಸಿದ್ದರು.