Bangalore 2nd Airport | ಏ.7- 9ರ ನಡುವೆ ಕೇಂದ್ರ ತಂಡ ಆಗಮನ; ಮೂರು ಕಡೆ ಸ್ಥಳ ಪರಿಶೀಲನೆ- ಎಂ.ಬಿ.ಪಾಟೀಲ

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ ಎಂದು ಕೈಗಾರಿಕಾ ಸಚಿವರು ತಿಳಿಸಿದ್ದಾರೆ.;

Update: 2025-03-22 10:51 GMT

ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. ಈ ಜಾಗಗಳ ಪೂರ್ವ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕ ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗಿರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆ 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಬೇಡಿಕೆ ಕಾರ್ಯ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ. ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಹೇಳಿದರು.

Tags:    

Similar News