ಎಸ್ಸಿ-ಎಸ್ಟಿ ಆಯೋಗಕ್ಕೆ ಅಧ್ಯಕ್ಷರ ನೇಮಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಖಚಿತಪಡಿಸುವುದು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವುದು ಆಯೋಗದ ಮುಖ್ಯ ಉದ್ದೇಶ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.;
ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ
ದಲಿತ ಸಮುದಾಯದ ಜೊತೆ ಸದಾ ನಮ್ಮ ಸರ್ಕಾರವಿದೆ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಈ ಕುರಿತು ಇತ್ತೀಚೆಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಪತ್ರ ಬರೆದಿರುವ ಅವರು, ಈ ಆಯೋಗವು ಸಂವಿಧಾನಬದ್ಧವಾಗಿ ರಚಿತವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ, ಅಭಿವೃದ್ಧಿಗೆ ಪೂರಕವಾಗಿರುವುದರಿಂದ ಆಯೋಗಕ್ಕೆ ಅಧ್ಯಕ್ಷರನ್ನು ಕೂಡಲೇ ನೇಮಿಸುವಂತೆ ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯನ್ನು ಖಚಿತಪಡಿಸುವುದು, ಅವರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಶೋಷಣೆ ತಡೆಗಟ್ಟುವುದು ಆಯೋಗದ ಮುಖ್ಯ ಉದ್ದೇಶ ಎಂದರು.
ಶಾಶ್ವತ ಆಯೋಗ ಸ್ಥಾಪನೆ: ಸಿಎಂ ಭರವಸೆ
ಒಳ ಮೀಸಲಾತಿ ನೀಡಿದ ಕುರಿತು ವಿಧಾನಸಭೆ ಅದಿವೇಶನದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿಗೆ ಶಾಶ್ವತ ಆಯೋಗ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆಯೋಗವು ಪರಿಶಿಷ್ಟ ಜಾತಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ದತ್ತಾಂಶ ಸಂಗ್ರಹಿಸಿ ಸರ್ಕಾರಕ್ಕೆ ಅಗತ್ಯ ಅಂಕಿ-ಅಂಶಗಳನ್ನು ನೀಡಲಿದೆ ಎಂದು ತಿಳಿಸಿದ್ದರು.