ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ; ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜುಗೆ ನೋಟಿಸ್ ಜಾರಿ
ನೋಟಿಸ್ ತಲುಪಿದ 7 ದಿನಗಳಲ್ಲಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.;
ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಸ್ತಾಂತರದ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರಿಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ.
'ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದೀರಿ. ನಿಮ್ಮ ಈ ಬಹಿರಂಗ ಹೇಳಿಕೆಯಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ನಿಮ್ಮ ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ನೋಟಿಸ್ ತಲುಪಿದ 7 ದಿನಗಳಲ್ಲಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಸತತ ಎಚ್ಚರಿಕೆ ನೀಡಿದರೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದರು.
'ಮುಖ್ಯಮಂತ್ರಿ ಅಧಿಕಾರ, ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆ ಕೊಟ್ಟು ಗೊಂದಲ ಮೂಡಿಸಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ, ಶಿವಗಂಗಾ ಅವರು ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ' ಎಂದಿದ್ದರು.