ಸಿಂಧಿ ಶಾಲೆಯಲ್ಲಿ ಕನ್ನಡ ಮಾತನಾಡಿದ ಮಕ್ಕಳಿಗೆ ದಂಡ; ಆಕ್ರೋಶ

ಸರ್ಕಾರದ ಕನ್ನಡ ಪರ ನಿಲುವು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ. ನೆಲದ ಭಾಷೆಯನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಿ ಎನ್‌ಒಸಿ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.;

Update: 2025-09-16 13:20 GMT

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಶೋತ್ತಮ ಬಿಳಿಮಲೆ

Click the Play button to listen to article

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ, ಇಂಗ್ಲಿಷ್​​ ಷ್‌ ಭಾಷೆಯಲ್ಲಿ ಮಾತ್ರ ಸಂವಹನ ನಡೆಸಬೇಕು ಎಂಬ ಒತ್ತಡ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ  ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. 

ಕಠಿಣ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ 

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಮಗೆ ಸಲ್ಲಿಸಿರುವ ವರದಿಯಲ್ಲಿ ಸಿಂಧಿ ಪ್ರೌಢಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿರುವುದಕ್ಕೆ ದಂಡ ವಿಧಿಸಿರುವುದನ್ನು ಶಾಲೆಯ ಪ್ರಾಂಶುಪಾಲರೇ ಒಪ್ಪಿಕೊಂಡಿರುವ ಬಗ್ಗೆ ಖಚಿತ ದಾಖಲೆಗಳಿವೆ ಎಂದು ಅವರು ತಿಳಿಸಿದರು. 

ಶಾಲೆಯ ವಿದ್ಯಾರ್ಥಿಗಳೇ ಕನ್ನಡದಲ್ಲಿ ಮಾತನಾಡಿದಕ್ಕೆ ತಮ್ಮಿಂದ ದಂಡ ವಸೂಲಿ ಮಾಡಲಾಗಿದೆ ಎಂಬ ಅಂಶವನ್ನು ಉಪ ನಿರ್ದೇಶಕರ ಭೇಟಿಯ ಸಂದರ್ಭದಲ್ಲಿ ಬಹಿರಂಗಪಡಿಸಿದ್ದು, ರಾಜಧಾನಿಯ ಪ್ರತಿಷ್ಠಿತ ಶಾಲೆಯೊಂದು ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಈ ರೀತಿ ಕಸಿಯುತ್ತಿರುವುದು, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿರುವುದು ಹಾಗೂ ಕನ್ನಡದ ಕುರಿತಂತೆ ಲಘು ಧೋರಣೆಯನ್ನು ತಳೆದಿರುವುದು ಕನ್ನಡದ ಹಿತದೃಷ್ಠಿಯಿಂದ ಅತ್ಯಂತ ನಕಾರಾತ್ಮಕ ಬೆಳವಣಿಗೆಯಾಗಿದೆ. ಇಂತಹ ಶಾಲೆಗೆಳ ವಿರುದ್ದ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದರೆ ಕನ್ನಡ ತನ್ನ ನೆಲದಲ್ಲಿಯೇ ಪರಕೀಯ ಸ್ಥಾನಕ್ಕೆ ತೃಪ್ತಿಪಡಬೇಕಾದ ಅನಿವಾರ್ಯತೆಗೆ ಸಾಕ್ಷಿಯಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಎನ್‌ಒಸಿ ರದ್ದು ಮಾಡಿ

ಸರ್ಕಾರದ ಕನ್ನಡ ಪರ ನಿಲುವು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ. ನೆಲದ ಭಾಷೆಯನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಿ ಎನ್‌ಒಸಿ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಕನ್ನಡದ ಹಿತದೃಷ್ಠಿಯಿಂದ ಈ ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ.

Tags:    

Similar News