ಬಿಕ್ಲು ಶಿವ ಹತ್ಯೆ ಪ್ರಕರಣ| ಬೈರತಿ ಬಸವರಾಜ್ ಬಂಧನಕ್ಕೆ ತಡೆ ರದ್ದತಿಗೆ ಅರ್ಜಿ ಸಲ್ಲಿಸಿದ ಸಿಐಡಿ
ಕೊಲೆಗೂ, ತಮಗೂ ಸಂಬಂಧವಿಲ್ಲ, ಮೃತರು ವೈಯಕ್ತಿಕವಾಗಿ ತಿಳಿದಿಲ್ಲ ಎಂದು ವಾದಿಸಿದ್ದ ಸಚಿವ ಬೈರತಿ ಬಸವರಾಜ್ ಅವರು ಎಫ್‌ಐಆರ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿತ್ತು.
ಬಿಕ್ಲು ಶಿವ ಮತ್ತು ಬೈರತಿ ಬಸವರಾಜ್
ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ರದ್ದು ಮಾಡುವಂತೆ ಸಿಐಡಿ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿದ ನಂತರ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು ವಿಚಾರಣೆಯನ್ನು ಮುಂದೂಡಿದರು.
ಜುಲೈ 15 ರಂದು ಭಾರತಿನಗರದ ಮಿನಿ ಅವೆನ್ಯೂ ರಸ್ತೆಯಲ್ಲಿರುವ ಮನೆಯ ಬಳಿ ಶಿವಕುಮಾರ್ ಕೊಲೆಗೀಡಾಗಿದ್ದರು. ಈ ಪ್ರಕರಣದಲ್ಲಿ ಬಸವರಾಜ್ ಅವರನ್ನು 5ನೇ ಆರೋಪಿ ಎಂದು ಪೊಲೀಸರು ಉಲೇಖಿಸಿದ್ದರು. ಜುಲೈ 24 ರಂದು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
ಎಫ್‌ಐಆರ್ ಪ್ರಶ್ನಿಸಿ ಬಸವರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೊಲೆಗೂ ತಮ್ಮ ಸಂಬಂಧವಿಲ್ಲ ಮತ್ತು ಮೃತರು ವೈಯಕ್ತಿಕವಾಗಿ ತಿಳಿದಿಲ್ಲ ಎಂದು ವಾದಿಸಿದ್ದರು. ಇದನ್ನು ಪರಿಗಣಿಸಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿತ್ತು.
ಬುಧವಾರದ ವಿಚಾರಣೆಯಲ್ಲಿ ಹೆಚ್ಚುವರಿ ರಾಜ್ಯ ಸಾರ್ವಜನಿಕ ಅಭಿಯೋಜಕ ಬಿ.ಎನ್. ಜಗದೀಶ್ ಅವರು ಪ್ರಕರಣದ ಇತರ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಜೊತೆಗೆ, ಬಸವರಾಜ್ ತನಿಖೆಗೆ ಸಹಕರಿಸುತ್ತಿಲ್ಲ. ಕಸ್ಟಡಿಯ ವಿಚಾರಣೆ ಅಗತ್ಯವಿದೆ ಎಂದು ವಾದಿಸಿದರು.
ಪ್ರಕರಣದ ಹಿನ್ನೆಲೆ
ಜುಲೈ 15ರ ರಾತ್ರಿ ಬೆಂಗಳೂರಿನ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಜಮೀನು ವಿವಾದವೇ ಈ ಕೊಲೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಫ್ರೆಡ್ರಿಕ್ ಎಂಬುವವರನ್ನು ಬಂಧಿಸಲಾಗಿತ್ತು.ಈ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಅವರ ಹೆಸರು ಕೇಳಿಬಂದಿತ್ತು.
ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಬಂಧನ ಭೀತಿಯಿಂದ ಹೈಕೋರ್ಟ್ ಮೊರೆ ಹೋಗಿದ್ದರು. ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಬೈರತಿ ಬಸವರಾಜ್, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದರು. ಆದರೆ, ಅವರನ್ನು ಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಇದೀಗ ಅದನ್ನು ತೆರವುಗೊಳಿಸುವಂತೆ ಕೋರಿ ಸಿಐಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.