ಮುನಿರತ್ನ ಅವರ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು
ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣುವುದಿಲ್ಲ.
ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜಿಪಿ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ.
ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ. 40% ಕಮಿಷನ್ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.
ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಆಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿದ್ದಾರೆ.
ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು ಎಂದು ತಿಳಿಸಿದ್ದಾರೆ.