ಶಾಸಕರಿಗೆ ಹಣದ ಆಮಿಷ | ಹಗರಣ ಮುಚ್ಚಿಹಾಕಲು ಹತಾಶೆಯ ಸುಳ್ಳಿನ ಕಂತೆ; ಸಿಎಂ ಹೇಳಿಕೆಗೆ ವಿಜಯೇಂದ್ರ ತಿರುಗೇಟು

ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಮೇಲೆ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಶಾಸಕರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Update: 2024-11-14 08:58 GMT

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಬಿಜೆಪಿ ನಾಯಕರು ಹಣದ ಆಮಿಷವೊಡ್ಡಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿಎಂ ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಇದು ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಮೇಲೆ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಶಾಸಕರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿ ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯದ ಮಂತ್ರವಾಗಿದೆ. ನಿಮ್ಮ ಸರಣಿ ಹಗರಣಗಳ ಉರುಳು ಬಿಗಿಯಾಗುತ್ತಿರುವುದು ನಿದ್ದೆಗೆಡಿಸಿ, ನಿಮ್ಮ ಮನಸ್ಸನ್ನು ಅಸ್ಥಿರಗೊಳಿಸಿದೆ. ಆದ್ದರಿಂದಲೇ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವ ಪ್ರಯತ್ನ ಮಾಡುತ್ತಿದ್ದೀರಿ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ. ನಿಮ್ಮದೇ ತನಿಖಾ ಸಂಸ್ಥೆಗಳಿವೆ. ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಂತೆ ಆಗಲಿದೆ. ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಹೇಳಿಕೆ ನೀಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ. ಆದರೆ, ಕರ್ನಾಟಕದ ಜನತೆಯೇ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಲ್ಲಿರುವ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿ ಬಡ ಬಡಿಸುತ್ತಿದ್ದೀರಿ. 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿದ್ದೀರಿ. ಹಾಗಾದರೆ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕು. ಈ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Tags:    

Similar News