GST | ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೇರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಬೇರೆ ಇಲಾಖೆಗಳಿಗೆ ಹೋಲಿಸಿದರೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ವಾಣಿಜ್ಯ ಇಲಾಖೆ ಅಧಿಕಾರಿಗಳು ಸರ್ಕಾರ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿ ಸಾಧಿಸಲು ಪ್ರಯತ್ನಿಸಬೇಕು. ರಾಜ್ಯ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಘವು 50 ವರ್ಷಗಳ ಮೈಲಿಗಲ್ಲು ಸಾಧಿಸಿದೆ. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರ ನಿರ್ವಹಿಸಿದ್ದೇನೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ತುಂಬಿದೆ. ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದ್ದು, ಅದನ್ನು ತಡೆಗಟ್ಟಬೇಕು ಎಂದು ಸಲಹೆ ನೀಡಿದರು.
ತೆರಿಗೆ ಸಂಗ್ರಹಣೆ ಗುರಿ ಸಾಧಿಸಲು ಸೂಚನೆ
ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆ ಆಗುತ್ತಿದೆ. ಬೇರೆ ಇಲಾಖೆಗಳಿಗೆ ಹೋಲಿಸಿದರೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗಿದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿ ರೂ. ಗುರಿ ನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿ ರೂ. ತೆರಿಗೆ ಸಂಗ್ರಹಣೆ ಆಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿ ರೂ. ಗುರಿ ಇದೆ. ಅಧಿಕಾರಿಗಳು ಗುರಿ ಮೀರಿ ಸಾಧನೆ ಮಾಡಬೇಕು ಎಂದು ಸೂಚನೆ ನೀಡಿದರು.
ಪ್ರಸಕ್ತ ವರ್ಷ 4,09,000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದೆ. ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ. ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತಿದೆ ಎಂಬ ವಿರೋಧ ಪಕ್ಷದವರ ಟೀಕೆಗೆ ತಿರುಗೇಟು ನೀಡುವಂತೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದೇವೆ. ಸರ್ಕಾರದ ಈ ಯಶಸ್ಸಿನಲ್ಲಿ ಇಲಾಖೆ ಅಧಿಕಾರಿಗಳ ಶ್ರಮವಿದೆ ಎಂದರು.
ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆಗೆ ಬದ್ಧ
ನಾನು ಹಣಕಾಸು ಮಂತ್ರಿಯಾಗಿದ್ದರೂ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ, ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಿದೆ. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ ಎಂದರು.