ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ | ಜಾತಿನಿಂದನೆ ದೂರಿಗೆ ಪ್ರತಿದೂರು; ಪರಿಶೀಲಿಸಿ ಎಫ್‌ಐಆರ್ ದಾಖಲಿಸಲು ಸಿಎಂ ಸೂಚನೆ
ಪ್ರಸ್ತುತ, ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರ ಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಬೇಕು ಎಂದು ಸಿಎಂ ಸೂಚಿಸಿದರು.;
ಪರಿಶಿಷ್ಟ ಜಾತಿ-ಪಂಗಡದ ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಂತಹ ಪ್ರಕರಣಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರವಷ್ಟೇ ಸತ್ಯಾಂಶವಿದ್ದರೆ ಎಫ್‌ಐಆರ್ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ-ಪಂಗಡದ ( ದೌರ್ಜನ್ಯ ನಿಯಂತ್ರಣ) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿ ಬಾಕಿ ಇರುವುದು ಏಕೆ ಎಂದು ಪ್ರಶ್ನಿಸಿದರು.
ಪ್ರಸ್ತುತ, ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿ ಸಲ್ಲಿಸಬೇಕು ಎಂದು ಸಿಎಂ ಸೂಚಿಸಿದರು.
ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದರು.
ಪ್ರಕರಣಗಳ ತನಿಖೆಗೆ ಸಿಎಂ ಬೇಸರ
2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಆದರೆ, 4912 ಪ್ರಕರಣಗಳಲ್ಲಿ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 60ದಿನಗಳ ಒಳಗೆ ಕೇವಲ 4149 ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ.
ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಶೇ 63 ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ. ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು? ಎಂದು ಪ್ರಶ್ನಿಸಿದ ಸಿಎಂ, ಆಯಾ ವರ್ಷದಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಛಲವಾದಿ ನಾರಾಯಣಸ್ವಾಮಿ ಆಕ್ರೋಶ
ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ಪ್ರಕರಣ ಕುರಿತ ಸಭೆಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರು ಏರುದನಿಯಲ್ಲೇ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆದಿದೆ. ಆದರೂ ಯಾವುದೇ ಕ್ರಮ ಜರುಗಿಸಿಲ್ಲ, ಇಲ್ಲಿ ಮಾತ್ರ ಎಸ್ ಸಿ / ಎಸ್ಟಿ ದೌರ್ಜನ್ಯ ತಡೆ ಕುರಿತು ಮಾತಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗೆ ಗಮನ ಹರಿಸಲು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.