ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಸಿದ್ದರಾಮಯ್ಯ ಎದುರು ಚಂದ್ರಶೇಖರ ಸ್ವಾಮೀಜಿ ಮನವಿ
ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಚಂದ್ರಶೇಖರ ಸ್ವಾಮೀಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.;
ಒಂದು ಕಡೆ ಆಡಳಿತರೂಢ ಕಾಂಗ್ರೆಸ್‌ನಲ್ಲಿ ಉಪ ಮುಖ್ಯಮಂತ್ರಿ(ಡಿಸಿಎಂ) ಕುರಿತ ಚರ್ಚೆ ಭುಗಿಲೆದ್ದಿದ್ದರೆ, ಮತ್ತೊಂದು ಕಡೆ ಪ್ರಭಾವಿ ಒಕ್ಕಲಿಗ ಸ್ವಾಮೀಜಿಗಳು ತಮ್ಮ ಸಮುದಾಯದ ನಾಯಕ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೇ ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಸದ್ಯ ಕಾಂಗ್ರೆಸ್ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದ ರಾಜ್ಯ ನಾಯಕತ್ವದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ದೊಡ್ಡ ಸಂದೇಶ ರವಾನೆಯಾಗಿದೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ಕೆಂಪೇಗೌಡರ ಜಯಂತಿಯ ವೇದಿಕೆಯಲ್ಲಿಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ನೇರವಾಗಿ ನಿಮ್ಮ ಸಿಎಂ ಸ್ಥಾನವನ್ನು ಡಿ ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
"ಈಗಾಗಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅನುಭವ ಹೊಂದಿದ್ದಾರೆ. ಸದ್ಯ ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟು ಕೊಡಲಿ. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿಕೆ ಶಿವಕುಮಾರ್ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಶ್ರೀಗಳು ಮನವಿ ಮಾಡಿದರು.
ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಕೊಡಬೇಕೆಂಬ ಶ್ರೀಗಳ ಮನವಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಇನ್ನು ಶ್ರೀಗಳ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.
ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನಗಳ ಕುರಿತ ಚರ್ಚೆ ಕಾವೇರಿರುವ ಹೊತ್ತಿನಲ್ಲೇ ಈ ಇಬ್ಬರೂ ಜಂಟಿಯಾಗಿ ದೆಹಲಿ ಯಾತ್ರೆ ಕೈಗೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.