ಒಳ ಮೀಸಲಾತಿ | ಜಾರಿಯಲ್ಲಿರುವ ನೇಮಕಾತಿಗಳಿಗೆ ಸಂಪುಟ ನಿರ್ಧಾರ ಅನ್ವಯವಾಗದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸಂಪುಟ ತೀರ್ಮಾನ, ಈಗಾಗಲೇ ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳಿಗೆ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.;
ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸಂಪುಟ ತೀರ್ಮಾನ, ಈಗಾಗಲೇ ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳಿಗೆ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಒಳ ಮೀಸಲಾತಿ ಜಾರಿಗೆ ಆಯೋಗ ರಚಿಸುವ ಸಂಪುಟ ತೀರ್ಮಾನದ ವೇಳೆ, ನೇಮಕಾತಿ ಪ್ರಕ್ರಿಯೆಗಳಲ್ಲಿ ಕೂಡ ಒಳ ಮೀಸಲಾತಿ ಅನುಸಾರ ಹುದ್ದೆಗಳ ಹಂಚಿಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಸರ್ಕಾರ ಹೇಳಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಹೇಳಿಕೆ ಈಗಾಗಲೇ ಪ್ರಕ್ರಿಯೆ ಜಾರಿಯಲ್ಲಿರುವ ನೇಮಕಾತಿಗಳಿಗೂ ಅನ್ವಯವಾಗಲಿದೆ ಎಂಬ ತಪ್ಪು ಕಲ್ಪನೆಗೆ ಆ ಹೇಳಿಕೆ ಅವಕಾಶ ನೀಡಿತ್ತು. ಹಾಗಾಗಿ ನೇಮಕಾತಿ ಪ್ರಕ್ರಿಯೆ ಎದುರುನೋಡುತ್ತಿರುವ ಉದ್ಯೋಗಾಕಾಂಕ್ಷಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಆ ಹಿನ್ನೆಲೆಯಲ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಈಗಾಗಲೇ ಜಾರಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗೆ ಒಳಮೀಸಲಾತಿ ಕುರಿತ ಸಂಪುಟದ ತೀರ್ಮಾನ ಅನ್ವಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಮುಂದೆ ನಡೆಯುವ ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಈಗಾಗಲೇ ನೋಟಿಫಿಕೇಷನ್ ಆಗಿ ಜಾರಿಯಲ್ಲಿರುವ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ವಿಚಾರದ ಕುರಿತು ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.