ತವರು ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಫಿಲಂ ಸಿಟಿ; ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ
ಮೈಸೂರಿನಲ್ಲಿ ಫಿಲಂ ಸಿಟಿ ಸ್ಥಾಪನೆಗೆ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರ ನಿರ್ಧರಿಸಿತ್ತು. ಬಳಿಕ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಿತ್ರನಗರಿಯನ್ನು ತಮ್ಮ ಕ್ಷೇತ್ರ ರಾಮನಗರದಲ್ಲಿ ನಿರ್ಮಿಸಲು ಸಜ್ಜಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ತಾತಗುಣಿಯಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ನಿರ್ಧರಿಸಿತ್ತು.;
ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ (ಫಿಲಂ ಸಿಟಿ ) ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು, 110 ಎಕರೆ ಕೆಐಎಡಿಬಿ ಜಮೀನು ಹಸ್ತಾಂತರಿಸಲು ಆದೇಶ ನೀಡಿದ್ದಾರೆ.
ಸಿದ್ಧರಾಮಯ್ಯ ಅವರ ತವರೂರಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದು ಅವರ ಕನಸಿನ ಯೋಜನೆಯಾಗಿದ್ದು, ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣವಾಗುವ ಉದ್ದೇಶವಿದ್ದು, ಇದು ಸಿದ್ದರಾಮಯ್ಯ ಅವರ ವಿಧಾನಸಭಾ ಕ್ಷೇತ್ರವಾದ ವರುಣಾ ವ್ಯಾಪ್ತಿಯಲ್ಲಿ ಬರುತ್ತದೆ.
ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಲು ಸೂಚನೆ ನೀಡಿರುವ ಸಿದ್ದರಾಮಯ್ಯ, ಪಿಪಿಪಿ (ಸಾರ್ವಜನಿಕ- ಖಾಸಗಿ ಸಂಸ್ಥೆಗಳ ಸಹಭಾಗಿತ್ವ) ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ಮೂಲಕ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ (2017) ಮೈಸೂರಿನಲ್ಲಿ ಚಿತ್ರನಗರಿ ಆರಂಭಿಸುವ ಬಗ್ಗೆ ಯೋಜನೆ ರೂಪಿಸಲಾಗಿತ್ತು. ಬಳಿಕ 2018 ರಲ್ಲಿ ಕುಮಾರಸ್ವಾಮಿ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ವೇಳೆ ರಾಮನಗರದಲ್ಲಿ ಚಿತ್ರ ನಗರಿ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದರು. 2020 ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಬೆಂಗಳೂರು ಹೊರವಲಯದ ಕನಕಪುರ ರಸ್ತೆ ತಾತಗುಣಿಯ ರೋರಿಚ್ ದೇವಿಕಾರಾಣಿ ಎಸ್ಟೇಟ್‌ನಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರಿನ ಹಿಮ್ಮಾವು ಪ್ರದೇಶದಲ್ಲೇ ಚಿತ್ರನಗರಿ ಸ್ಥಾಪಿಸುವ ನಿರ್ಧಾರಕ್ಕೆ ಬರಲಾಗಿದೆ.
ಜಮೀನು ಹಸ್ತಾಂತರ
ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಕ್ಕೆ ಅದೇಶಿಸಿರುವ ಅವರು ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು. 2015-16 ರಲ್ಲಿ ಆಯವ್ಯಯದಲ್ಲಿ ಚಿತ್ರನಗರಿ ಸಂಬಂಧ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಜಮೀನನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಲು ಸೂಚಿಸಿದರು.
ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸುವ ಉದ್ದೇಶ ಈ ಚಿತ್ರನಗರಿಯದ್ದಾಗಿದೆ. ಚಿತ್ರನಗರಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‌ಗಳನ್ನೂ ನಿರ್ಮಿಸಲೂ ಸೂಚನೆ ನೀಡಲಾಗಿದ್ದು, ಟ್ರಾನ್ಸಾಕ್ಷನ್ ಅಡ್ವೈಸರ್ (ವಹೀವಾಟು ಸಲಹೆಗಾರ) ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು; ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಒತ್ತು ನೀಡಬೇಕು ಎಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.