ವಸತಿ ಯೋಜನೆಗಳಿಗೆ ವೇಗ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಮನೆಗಳ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲು ಮತ್ತು ಫಲಾನುಭವಿಗಳ ವಂತಿಕೆ ಪಾವತಿಯಲ್ಲಿನ ಅಡಚಣೆಗಳನ್ನು ನಿವಾರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದರು.;

Update: 2025-09-10 12:20 GMT

ವಸತಿ ಇಲಾಖೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿದರು. 

Click the Play button to listen to article

ರಾಜ್ಯದಲ್ಲಿ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮನೆಗಳ ನಿರ್ಮಾಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಹಸ್ತಾಂತರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 10ರಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಮನೆಗಳ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲು ಮತ್ತು ಫಲಾನುಭವಿಗಳ ವಂತಿಕೆ ಪಾವತಿಯಲ್ಲಿನ ಅಡಚಣೆಗಳನ್ನು ನಿವಾರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)

ಈ ಯೋಜನೆಯಡಿ ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಇವುಗಳ ಪೈಕಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. ಮೊದಲ ಹಂತದಲ್ಲಿ ಪೂರ್ಣಗೊಳ್ಳುವ ಹಂತದಲ್ಲಿರುವ 7,900 ಮನೆಗಳಿಗೆ ಸಂಬಂಧಿಸಿದಂತೆ, ಫಲಾನುಭವಿಗಳಿಂದ 216 ಕೋಟಿ ರೂಪಾಯಿ ವಂತಿಕೆ ಬಾಕಿ ಇದೆ. ಈ ಮೊತ್ತವನ್ನು ಪಾವತಿಸಲು ಅನುಕೂಲವಾಗುವಂತೆ, ಹುಡ್ಕೋದಿಂದ (HUDCO) ಸಾಲ ಪಡೆಯುವ ಸಾಧ್ಯತೆಗಳನ್ನು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸ್ಲಂ ಬೋರ್ಡ್ ಮತ್ತು ಅಂಬೇಡ್ಕರ್ ವಸತಿ ಯೋಜನೆ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ನಿರ್ಮಿಸಲಾಗುತ್ತಿರುವ 42,000 ಮನೆಗಳಿರುವ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕೂಡಲೇ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ) ಅಡಿಯಲ್ಲಿ ಬಜೆಟ್‌ನಲ್ಲಿ 900 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗಿದೆ. ಈ ಯೋಜನೆಯಡಿ ಒಟ್ಟು 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇದರಲ್ಲಿ 56,682 ಮನೆಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ.

ಹಣಕಾಸು ಇಲಾಖೆಗೆ ಸೂಚನೆ

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಮನೆಗಳನ್ನು ಪೂರ್ಣಗೊಳಿಸಲು ಬೇಕಾಗುವ ಒಟ್ಟು ಅನುದಾನದ ಬಗ್ಗೆ ಸಮಗ್ರ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. "ಸರ್ವರಿಗೂ ಸೂರು" ಒದಗಿಸುವ ಸರ್ಕಾರದ ಬದ್ಧತೆಯನ್ನು ಕಾರ್ಯಗತಗೊಳಿಸಲು ಯಾವುದೇ ವಿಳಂಬವಾಗಬಾರದು ಎಂದು ಅವರು ತಾಕೀತು ಮಾಡಿದರು.

Tags:    

Similar News