ಹಾಸನ ಗಣೇಶ ವಿಸರ್ಜನೆ ದುರಂತ: ಸರ್ಕಾರದ ತ್ವರಿತ ಸ್ಪಂದನೆ, ರಾತ್ರಿಯಿಡೀ ಕಾರ್ಯಾಚರಣೆ
ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.;
ಹಾಸನ ದುರಂತ
ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಜಿಲ್ಲಾಡಳಿತವು ರಾತ್ರಿಯಿಡೀ ಕೆಲಸ ಮಾಡಿದೆ.
ಘಟನೆ ನಡೆದ ಕೂಡಲೇ ಸಚಿವ ಕೃಷ್ಣ ಬೈರೇಗೌಡರು ಅಧಿಕಾರಿಗಳು ಹಾಗೂ ವೈದ್ಯರ ತಂಡಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಮೃತರ ಕುಟುಂಬಗಳನ್ನು ಸಂಪರ್ಕಿಸಿದ ಅಧಿಕಾರಿಗಳು, ಮರಣೋತ್ತರ ಪರೀಕ್ಷೆಯನ್ನು ರಾತ್ರಿಯೇ ನಡೆಸಿ, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿಗಳೇ ಖುದ್ದು ಗಾಯಾಳುಗಳ ಚಿಕಿತ್ಸೆಯ ಉಸ್ತುವಾರಿ ವಹಿಸಿಕೊಂಡಿದ್ದು, ಅವರಿಗೆ ಬೇಕಾದ ಎಲ್ಲಾ ರೀತಿಯ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವೈದ್ಯರ ತಂಡವನ್ನು ರಚಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು, ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸುತ್ತಿದ್ದಾರೆ ಹಾಗೂ ಮೃತರ ಕುಟುಂಬದವರಿಗೆ ಸಾಂತ್ವನ ಹೇಳುತ್ತಿದ್ದಾರೆ.
ಘಟನೆಯ ವಿವರ
ಶುಕ್ರವಾರ ರಾತ್ರಿ ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಹಾಸನ ಕಡೆಯಿಂದ ಅತಿವೇಗವಾಗಿ ಬಂದ ಕಂಟೇನರ್ ಲಾರಿಯು ಮೊದಲು ರಸ್ತೆಬದಿ ನಿಲ್ಲಿಸಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಡಿಜೆ ಮುಂದೆ ನೃತ್ಯ ಮಾಡುತ್ತಿದ್ದ ಯುವಕರ ಮೇಲೆ ಹರಿದಿದೆ. ಈ ಭೀಕರ ದುರಂತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.