ದೆಹಲಿಯಲ್ಲಿ ಸಿದ್ದರಾಮಯ್ಯ -ರಾಹುಲ್‌ ಗಾಂಧಿ ಮಾತುಕತೆ; ಸಂಕ್ರಾಂತಿ ಹೊತ್ತಿಗೆ ಸಂಪುಟ ಪುನಾರಚನೆ?

ವರ್ಷಾಂತ್ಯ ಇಲ್ಲವೇ ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.

Update: 2025-11-15 11:30 GMT
Click the Play button to listen to article

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಗೊಂದಲಗಳ ಕುರಿತು ಚರ್ಚಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. 

ಬಿಹಾರ ಚುನಾವಣೆಯ ಸೋಲಿನ ಮರುದಿನವೇ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್‌ ಗಾಂಧಿ ಅವರೊಂದಿಗೆ ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಈ ವೇಳೆ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರ ಎಲ್ಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಸಂಪುಟ ಪುನಾರಚನೆಗೆ ತ್ವರಿತವಾಗಿ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಅವರು ಬೇಡಿಕೆ ಮುಂದಿಟ್ಟಿದ್ದರು. ಈ ಸಂಬಂಧ ರಾಹುಲ್‌ ಗಾಂಧಿ ಹಾಗೂ ಸೋನಿಯಾಗಾಂಧಿ ಅವರೊಂದಿಗೆ ಚರ್ಚಿಸಿದ್ದು, ಎಲ್ಲವನ್ನೂ ವರಿಷ್ಠರು ಆಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ ಸಂಪುಟ ಪುನಾರಚನೆ ಮಾಡುವಂತೆ ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ಒಂದು ವೇಳೆ ಸಂಪುಟ ಪುನಾರಚನೆಗೆ ಹೈಕಮಾಂಡ್‌ ಅನುಮೋದನೆ ನೀಡಿದರೆ 15-17 ಮಂದಿ ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ವರ್ಷಾಂತ್ಯ ಇಲ್ಲವೇ ಸಂಕ್ರಾಂತಿ ಆಸುಪಾಸಿನಲ್ಲಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಶನಿವಾರ ದೆಹಲಿಯಲ್ಲಿ ಕಪಿಲ್‌ ಸಿಬಲ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂತರ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಸಂಪುಟ ಪುನಾರಚನೆಗೆ ಈ ಹಿಂದೆಯೇ ಹೈಕಮಾಂಡ್‌ ಒಪ್ಪಿಗೆ ನೀಡಿತ್ತು. ಪ್ರಸ್ತುತ, ಸಂಪುಟ ಪುನಾರಚನೆ ಅಗತ್ಯತೆ ಕುರಿತಂತೆ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಇಬ್ಬರಿಗೂ ಮನವರಿಕೆ ಮಾಡಿಕೊಟ್ಟರು ಎನ್ನಲಾಗಿದೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿ ಮಾಡಿ ಚರ್ಚಿಸಿದ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಜೆಯೇ ಬೆಂಗಳೂರಿಗೆ ವಾಪಸ್‌ ಮರಳಲಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ್‌ ದೆಹಲಿಗೆ ದೌಡಾಯಿಸಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ತೀವ್ರಗೊಳ್ಳುವಂತೆ ಮಾಡಿದೆ. 

ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿದ್ದ ಡಿಕೆಶಿ

ಈ ಹಿಂದೆ ಸಂಪುಟ ಪುನಾರಚನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿತ್ತು. ಆದರೆ ನಾಯಕತ್ವ ಬದಲಾವಣೆ ಜೊತೆಗೆ ಸಂಪುಟ ಪುನಾರಚನೆ ಮಾಡುವಂತೆಯೂ ಡಿ.ಕೆ.ಶಿವಕುಮಾರ್‌ ಪಟ್ಟು ಹಿಡಿದಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಗೆ ಮಾತ್ರ ಬೇಡಿಕೆ ಮುಂದಿಟ್ಟಿದ್ದರು. 

ಇದೀಗ ಮತ್ತೊಮ್ಮೆ ರಾಹುಲ್ ಗಾಂಧಿ ಅವರ ಮುಂದೆ ಸಂಪುಟ ಪುನಾರಚನೆಯ ಪ್ರಸ್ತಾಪ ಮಾಡಿದ್ದು, ರಾಹುಲ್‌ ಗಾಂಧಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಸಂಪುಟ ಪುನಾರಚನೆಗೆ ದಿನಾಂಕ ನಿಗದಿ ಮಾಡಿದರೆ 15-17 ಮಂದಿ ಸಚಿವರನ್ನು ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Tags:    

Similar News