ASHA Workers Protest | ಸಿಎಂ ಸಂಧಾನ; ಆಶಾ ಕಾರ್ಯಕರ್ತೆಯರ ಧರಣಿ ವಾಪಸ್‌

ಸಂಘಟನೆಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲು ಮುಖಂಡರು ಒಪ್ಪಿಗೆ ಸೂಚಿಸಿದರು.;

Update: 2025-01-10 12:02 GMT
ಆಶಾ ಕಾರ್ಯಕರ್ತೆಯರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಅವರು ಸಭೆ ನಡೆಸಿದರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಸಿಎಂ ಸಂಧಾನದ ನಂತರ ಹಿಂಪಡೆಯಲಾಗಿದೆ. 

ಸಂಘಟನೆಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲು ಮುಖಂಡರು ಒಪ್ಪಿಗೆ ಸೂಚಿಸಿದರು.

ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವ ಧನವನ್ನು 8 ರಿಂದ 10 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಸಿಕ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ತಿಂಗಳು 10,000 ರೂ. ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ. ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ಸಂಘಟನೆ ಮುಖಂಡರ ಜೊತೆ ಸಂಧಾನಕ್ಕೆ ಬಂದಿದ್ದರು. ಆದರೆ, ಸಂಧಾನ ವಿಫಲವಾಗಿತ್ತು.

ಆಶಾ ಕಾರ್ಯಕರ್ತೆಯರು ಸಿಎಂ ಸಿದ್ದರಾಮಯ್ಯ ಅವರೇ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುವವರೆಗೂ ಧರಣಿ ಕೈಬಿಡುವುದಿಲ್ಲ. ಇಲ್ಲಿಯೇ ಸಂಕ್ರಾಂತಿ ಹಬ್ಬ ಆಚರಿಸುವುದಾಗಿ ಪಟ್ಟು ಹಿಡಿದಿದ್ದರು. ಆ ಬಳಿಕ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ತೆರಳಿದ್ದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಂಘಟನೆ ಮುಖಂಡರನ್ನು ಕರೆಸಿಕೊಂಡು ಮಾತುಕತೆ ನಡೆಸಿದರು. ಸಂಘಟನೆ ಮುಂದಿಟ್ಟಿರುವ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಬಳಿಕ ಧರಣಿ ಮುಕ್ತಾಯ ಮಾಡಲು ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.

Tags:    

Similar News