ಸಿಎಂ ನಗರ ಪ್ರದಕ್ಷಿಣೆ, ತ್ಯಾಜ್ಯ ಕಂಡು ಕೆಂಡಾಮಂಡಲ, ಡಿಕೆಶಿ ಅನುಪಸ್ಥಿತಿ ಚರ್ಚೆಗೆ ಗ್ರಾಸ
ತ್ಯಾಜ್ಯ ಸುರಿದವರನ್ನು ತಕ್ಷಣ ಪತ್ತೆ ಹಚ್ಚಿ, ಅವರ ವಾಹನವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸುವಂತೆ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಹಾನಿ ಮತ್ತು ರಸ್ತೆಗುಂಡಿ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರ ಪ್ರದಕ್ಷಿಣೆ ನಡೆಸಿ, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೆ, ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಪಸ್ಥಿತಿಯು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.
ನಗರ ಪ್ರದಕ್ಷಿಣೆ ವೇಳೆ, ಹೊರ ವರ್ತುಲ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮೆರಾ ಇಲ್ಲದ ಜಾಗದಲ್ಲಿ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಕ್ಷಣವೇ ಕಾರು ನಿಲ್ಲಿಸಿ ಕೆಳಗಿಳಿದರು. "ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡುತ್ತೀರಾ? ಇದು ನಿಮ್ಮ ಕಣ್ಣಿಗೆ ಕಾಣಿಸುವುದಿಲ್ಲವೇ?" ಎಂದು ಬಿಬಿಎಂಪಿ, ಬಿಡಿಎ ಮತ್ತು ಸಂಚಾರಿ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿದರು.
ತ್ಯಾಜ್ಯ ಸುರಿದವರನ್ನು ತಕ್ಷಣ ಪತ್ತೆ ಹಚ್ಚಿ, ಅವರ ವಾಹನವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸುವಂತೆ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ಸೂಚನೆ
ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತದ ಬಳಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ನೀರು ನಿಲ್ಲುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಲ್ಲದೆ, ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ರಾತ್ರೋರಾತ್ರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಡಿಕೆಶಿ ಅನುಪಸ್ಥಿತಿ ಮತ್ತು ಚರ್ಚೆ
ಬೆಂಗಳೂರಿನ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೇ ಖುದ್ದು ಬೀದಿಗಿಳಿದು ಪರಿಶೀಲನೆ ನಡೆಸುವಾಗ, ನಗರದ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಗೈರುಹಾಜರಾಗಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಸಭೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಂದು ನಡೆದ ನಗರ ಪ್ರದಕ್ಷಿಣೆಯಲ್ಲಿ ಡಿಕೆಶಿ ಅವರ ಅನುಪಸ್ಥಿತಿಯು ಸರ್ಕಾರ ಮತ್ತು ಆಡಳಿತದಲ್ಲಿ ಸಮನ್ವಯದ ಕೊರತೆಯಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ.