ಗಣೇಶೋತ್ಸವ ಮೆರವಣಿಗೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಪಟಾಕಿ ಸಂಪೂರ್ಣ ನಿಷೇಧ
ಜಿಲ್ಲೆಯಲ್ಲಿ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಇಂತಹ ಅವಘಡಗಳು ಮರುಕಳಿಸದಂತೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.;
ಗಣೇಶೋತ್ಸವದ ಮೆರವಣಿಗೆ ವೇಳೆ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪಟಾಕಿ, ಸಿಡಿಮದ್ದು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ಹಾಗೂ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಸಮಾವೇಶಗಳ ಸಂದರ್ಭದಲ್ಲಿ ಅನ್ವಯವಾಗಲಿದೆ.
ನಿಷೇಧಕ್ಕೆ ಕಾರಣವೇನು?
ಆಗಸ್ಟ್ 29ರಂದು ದೊಡ್ಡಬಳ್ಳಾಪುರ ತಾಲೂಕಿನ ಮುತ್ತೂರು ಗ್ರಾಮದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ ಸ್ಫೋಟಗೊಂಡು 14 ವರ್ಷದ ಬಾಲಕ ಮುನಿ ಅಲಿಯಾಸ್ ಧನುಷ್ ಎಂಬುವ ಮೃತಪಟ್ಟಿದ್ದ. ಇದೇ ಘಟನೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಜಾಕೀರ್ ಹುಸೇನ್ ಸೇರಿದಂತೆ ಒಟ್ಟು ಒಂಬತ್ತು ಜನರು ತೀವ್ರವಾಗಿ ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯನ್ನು ಆಧರಿಸಿ ಈ ನಿಷೇಧಾಜ್ಞೆ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಇಂತಹ ಅವಘಡಗಳು ಮರುಕಳಿಸದಂತೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಧಿಕಾರವನ್ನು ಬಳಸಿ ಈ ಆದೇಶ ಹೊರಡಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸುವುದನ್ನು ತಡೆಯಲು ವಿಫಲರಾದರೆ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.