Karnataka By-Election | ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ಶಿಗ್ಗಾವಿ ಕ್ಷೇತ್ರದಿಂದ ಧಾರವಾಡ ಶಾಸಕ ವಿನಯ್‌ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅಥವಾ ಪತ್ನಿ ಶೀವಲೀಲಾ ಕುಲಕರ್ಣಿ ಅವರಿಗೆ ಟಿಕೆಟ್‌ ನೀಡುವ ಕುರಿತು ಸಮಾಲೋಚಿಸಿ ಅಭ್ಯರ್ಥಿ ಘೋಷಿಸಲು ಹೈಕಮಾಂಡ್‌ ನಿರ್ಧರಿಸಿದೆ.;

Update: 2024-10-24 02:33 GMT

ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಧವಾರ ರಾತ್ರಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಶಿಗ್ಗಾವಿ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ.

ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್‌ ಹಾಗೂ ಸಂಡೂರು ಎಸ್‌ಟಿ ಮೀಸಲು ಕ್ಷೇತ್ರಕ್ಕೆ ಇ.ಅನ್ನಪೂರ್ಣ ತುಕಾರಾಂ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಪಟ್ಟಿ ಬಿಡುಗಡೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಾಯಕರು ಅಂತಿಮಗೊಳಿಸಿದ್ದ ಅಭ್ಯರ್ಥಿಗಳ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿದ್ದರು. ಇದಕ್ಕೂ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ ಅಭ್ಯರ್ಥಿಗಳ ಘೋಷಣೆ ಕುರಿತ ನಕಲಿ ಆದೇಶ ಪತ್ರ ಹರಿದಾಡಿತ್ತು. ಇದಕ್ಕೆ ಸ್ಪಷ್ಟೀಕರಣ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಅಭ್ಯರ್ಥಿಗಳ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ ಎಂದು ಹೇಳಿದ್ದರು.

ಬುಧವಾರ ಕೆಪಿಸಿಸಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿತ್ತು. ಅದರಂತೆ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಶಿಗ್ಗಾವಿ ಕ್ಷೇತ್ರಕ್ಕೆ ಮಾತ್ರ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ. ಇಲ್ಲಿಂದ ಧಾರವಾಡ ಶಾಸಕ ವಿನಯ್‌ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅವರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಕಳುಹಿಸಿಕೊಡಲಾಗಿತ್ತು. ಈ ಮಧ್ಯೆ ವಿನಯ್‌ ಕುಲಕರ್ಣಿ ಪುತ್ರಿ ಬದಲು ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯ ಕೇಳಿಬಂದಿದ್ದು, ಪರಿಶೀಲಿಸಿ ಅಭ್ಯರ್ಥಿ ಅಂತಿಮಗೊಳಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

Tags:    

Similar News