ಬೆಳಗಾವಿಯಲ್ಲಿ ಬಿಸಿಯೂಟ ಕಲುಷಿತ : 24 ಮಕ್ಕಳು ಅಸ್ವಸ್ಥ, ನಾಲ್ವರು ಆಸ್ಪತ್ರೆಗೆ ದಾಖಲು
ಮಂಗಳವಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಶಿಕ್ಷಕರು ಮಕ್ಕಳನ್ನು ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.;
ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಆಹಾರದಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ನಾಲ್ವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಶಿಕ್ಷಕರು ಮಕ್ಕಳನ್ನು ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಈ ಪೈಕಿ ನಾಲ್ವರು ಮಕ್ಕಳು ಹೆಚ್ಚು ನಿತ್ರಾಣಗೊಂಡಿದ್ದರಿಂದ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಅಧಿಕಾರಿಗಳ ಭೇಟಿ ಮತ್ತು ತನಿಖೆ
ವಿಷಯ ತಿಳಿಯುತ್ತಿದ್ದಂತೆ ಡಿಡಿಪಿಐ ಲೀಲಾವತಿ ಹಿರೇಮಠ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಈಶ್ವರ ಗಡಾದಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. "ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ" ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು, ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಸಾಧ್ಯತೆಯ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಮಹಿಳಾ ಸ್ವಸಹಾಯ ಸಂಘವು ಅಡುಗೆ ಸಿದ್ಧಪಡಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಿಎಂ-ಪೋಷಣ್ ಶಕ್ತಿ ನಿರ್ಮಾಣ ಯೋಜನೆಯ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಭರವಸೆ ನೀಡಿದ್ದಾರೆ.