ಮತ್ತೆ ಮಳೆ ಅಬ್ಬರ | ಜು.31ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ
ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ.
ಮುಂದಿನ ನಾಲ್ಕು ದಿನ ಮಳೆ ಹೆಚ್ಚಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆಯ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರಕನ್ನಡ ಸೇರಿದಂತೆ ವಿವಿಧ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿಗೆ ರಜೆ
ತೀರ್ಥಹಳ್ಳಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡಿದೆ. ಮುಂಜಾಗೃತ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31 ರ ಬುಧವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
ಹಾಗೇ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡ ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದ್ದಾರೆ. ಮಂಗಳವಾರ ಮಧ್ಯಾಹ್ನದ ಬಳಿಕ ಸಾಗರ ತಾಲೂಕಿನಲ್ಲಿ ಮಳೆ ಮತ್ತು ಬಿರುಗಾಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕುಂಭದ್ರೋಣ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.
ಬುಧವಾರ (ಜು.31) ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು: ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ
ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಈ ತಾಲೂಕುಗಳ ಅಂಗನವಾಡಿಗಳಿಂದ ಪದವಿ ಕಾಲೇಜುಗಳವರೆಗೆ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಜೊತೆಗೆ ಜು.31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.