ಡಿ.ಕೆ. ಶಿವಕುಮಾರ್ ಪ್ರಕರಣ | ನ್ಯಾಯಾಲಯ ಬಲಹೀನವಲ್ಲ: ಸುಪ್ರೀಂ ಕೋರ್ಟ್
ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂಪಡೆದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.;
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ನಡೆಸುತ್ತಿರುವ ತನಿಖೆಗೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಲೋಕಾಯುಕ್ತದ ತನಿಖೆ ರದ್ದುಗೊಳಿಸಲು ಈ ನ್ಯಾಯಾಲಯವು ಬಲಹೀನವಾಗಿಲ್ಲ ಎಂದೂ ನ್ಯಾಯಾಲಯ ಹೇಳಿದೆ.
ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂಪಡೆದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಯತ್ನಾಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, 'ಸಿಬಿಐ ಪೂರ್ಣ ತನಿಖೆ ನಡೆಸಿದ ನಂತರವೂ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿದೆ. ಸಿಬಿಐ ತನಿಖೆಯ ಅನುಮತಿ ಹಿಂಪಡೆದಿರುವುದು ದುಷ್ಕೃತ್ಯ. ಶಿವಕುಮಾರ್ ಅವರು ಸಂಪುಟದ ಸದಸ್ಯರಾಗಿರುವುದರಿಂದ ಲೋಕಾಯುಕ್ತದವರು ಮುಕ್ತಾಯ ವರದಿ ಸಲ್ಲಿಸುವ ಸಾಧ್ಯತೆ ಇದೆ. ಆಗ ಇಡೀ ಪ್ರಕ್ರಿಯೆ ನಿಷ್ಟ್ರಯೋಜಕ ಆಗುತ್ತದೆ' ಎಂದು ವಾದಿಸಿದರು. ಆಗ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಬೇರೆ ನ್ಯಾಯಾಲಯದಲ್ಲಿ ಇರುವುದರಿಂದ ಇನ್ನೊಂದು ದಿನ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಸಿಬಿಐ ವಕೀಲರು ಮನವಿ ಮಾಡಿದರು. ಇದಕ್ಕೆ ಪೀಠ ಒಪ್ಪಿತು. ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಬೇಕು ಎಂದು ಸಿಬಿಐ ವಕೀಲರು ಮನವಿ ಮಾಡಿದರು. ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ಪ್ರಕರಣದ ವಿಚಾರಣೆಯನ್ನು ಜನವರಿ 22ಕ್ಕೆ ನ್ಯಾಯಪೀಠ ಮುಂದೂಡಿತು.