ಜಾತಿ ನಿಂದನೆ ಪ್ರಕರಣ | ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನ ಬಂಧಿಸಲಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಕೋರ್ಟ್ ಸೆ.30ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಸದ್ಯ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಶಾಸಕ ಮುನಿರತ್ನ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು 82ನೇ ಸಿಹೆಚ್‌ಹೆಚ್ ಕೋರ್ಟ್ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ನ್ಯಾಯಾಧೀಶ ಗಜಾನನ ಭಟ್ ನಡೆಸಿದರು. ವಾದ, ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯ ಆದೇಶವನ್ನು ಸೆ.19ರ ಗುರುವಾರಕ್ಕೆ ಕಾಯ್ದಿರಿಸಿದರು.
ಮಂಗಳವಾರಕ್ಕೆ ಮುನಿರತ್ನ ಎರಡು ದಿನದ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಅವರನ್ನು ಸೆ.30ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಮುನಿರತ್ನ ಪರವಾಗಿ ವಕೀಲ ಅಶೋಕ್ ಹಾರನಹಳ್ಳಿ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.
"ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ಮುನಿರತ್ನ ಅವರು ತಿರುಪತಿಗೆ ಹೋಗುವಾಗ ಬಂಧಿಸಲಾಗಿದೆ. ನೋಟಿಸ್ ಕೊಡದೇ ಅವರನ್ನು ಬಂಧಿಸಲಾಗಿದೆ. ಇದು ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ" ಎಂದು ವಾದ ಮಂಡಿಸಿದ್ದರು.
ಮುನಿರತ್ನ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೇಳಿದ ಕಾರಣ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಬುಧವಾರ ಅರ್ಜಿ ವಿಚಾರಣೆ ನಡೆಸಿ, ಗುರುವಾರಕ್ಕೆ ತೀರ್ಪು ಕಾಯ್ದಿರಿಸಲಾಗಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆ.14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.