Covid-19 |ಕೋವಿಡ್‌ ಪರೀಕ್ಷೆ ಹೆಸರಲ್ಲಿ ಅಧಿಕ ಶುಲ್ಕ ವಸೂಲಿ; ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ಕೊಟ್ಟ ಸಿಎಂ

ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.;

Update: 2025-06-11 14:31 GMT

ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆರೋಗ್ಯ ಇಲಾಖೆ ಸಚಿವರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. 

ದುಬಾರಿ ಹಣ ಕೀಳುವವರ ವಿರುದ್ಧ ಕ್ರಮ

ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋವಿಡ್‌ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಸೂಚಿಸಿದರು.

ಕೋವಿಡ್‌ಗೆ 11 ಮಂದಿ ಬಲಿ

ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದರು.

ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದೆ. ಇವುಗಳಲ್ಲಿ 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ, ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಮೃತಪಟ್ಟಿದ್ದಾರೆ. ಒಂದು ಪ್ರಕರಣದ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಸಭೆಯಲ್ಲಿ ಆರೋಗ್ಯ ಸಚಿವ ಡಾ.ದಿನೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Similar News