ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆ, ಬೆಂಗಳೂರಿನಲ್ಲಿ ಮತ್ತೆ ಇಬ್ಬರಿಗೆ ಸೋಂಕು

ಮಲ್ಲೇಶ್ವರಂನಲ್ಲಿ 45 ವರ್ಷದ ವ್ಯಕ್ತಿ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸೋಂಕಿತರಿಗೆ ವಿದೇಶ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ದೃಢಪಟ್ಟಿದ್ದು, ಸದ್ಯ ಇಬ್ಬರೂ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.;

Update: 2025-05-25 05:44 GMT

ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಸರಣ ನಿಧಾನವಾಗಿ ಹೆಚ್ಚಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಭಾನುವಾರದಿಂದಲೇ ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ಬೆಂಗಳೂರಿನಲ್ಲಿ ನಿನ್ನೆ ವೃದ್ಧರೊಬ್ಬರು ಸೋಂಕಿನಿಂದ ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಲ್ಲೇಶ್ವರಂನಲ್ಲಿ 45 ವರ್ಷದ ವ್ಯಕ್ತಿ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸೋಂಕಿತರಿಗೆ ವಿದೇಶ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ದೃಢಪಟ್ಟಿದ್ದು, ಸದ್ಯ ಇಬ್ಬರೂ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೊರೋನಾ ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡಿವೆ. ಆಂಧ್ರಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಸರ್ಕಾರವು ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಜನನಿಬಿಡ ಪ್ರದೇಶಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದೆ.

ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಓಮಿಕ್ರಾನ್‌ನ ಜೆಎನ್‌1 ಉಪ ತಳಿಗಳಾದ ಎನ್‌ಬಿ.1.8 ಮತ್ತು ಎಲ್‌ಎಫ್‌.7 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಮತ್ತೊಂದೆಡೆ, ನೆರೆಯ ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊಟ್ಟಾಯಂ, ಎರ್ನಾಕುಲಂ ಮತ್ತು ತಿರುವನಂತಪುರಂ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಸರ್ಕಾರ ಸೂಚಿಸಿದೆ.

ಕೊರೋನಾ ಸೋಂಕಿನ ಜೊತೆಗೆ, ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಪೂರ್ವ ಮುಂಗಾರು ಮಳೆಯ ಆರ್ಭಟದ ನಡುವೆ ಡೆಂಗ್ಯೂ, ಮಲೇರಿಯಾ, ಚಿಕುನ್‌ಗುನ್ಯಾ ಸೇರಿದಂತೆ ಸಾಮಾನ್ಯ ಜ್ವರ, ವೈರಲ್ ಸೋಂಕು, ನೆಗಡಿ, ಸುಸ್ತು, ತಲೆನೋವು ಪ್ರಕರಣಗಳು ಸಹ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿವೆ.

Tags:    

Similar News