ಚನ್ನಪಟ್ಟಣ ಉಪ ಚುನಾವಣೆ | ವಿಧಾನ ಪರಿಷತ್ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ
ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳಿದ ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.;
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರ ದೋಸ್ತಿ ಪಕ್ಷಗಳಾದ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ.
ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯ ಆಯ್ಕೆಯಾಗಿದ್ದ ಮಾಜಿ ಶಾಸಕ ಹಾಗೂ ಚನ್ನಪಟ್ಟಣ ಕ್ಷೇತ್ರದ ಪ್ರಬಲ ಎನ್‌ಡಿಎ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಸೋಮವಾರ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಫೈಟ್ ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳಿದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇ ಸ್ವಇಚ್ಛೆಯಿಂದ ಬಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂಬ ಕಾರಣಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಸ್ಪರ್ಧೆಗೆ ಅವಕಾಶ ನೀಡುವಂತೆ ಬಿಜೆಪಿ ವರಿಷ್ಠರು ಹಾಗೂ ಕುಮಾರ ಸ್ವಾಮಿ ಅವರಿಗೆ ಸಾಕಷ್ಟು ಮನವಿ ಮಾಡಿದ್ದೇನೆ ಎಂದರು.
ಟಿಕೆಟ್ ಸಿಗದಿದ್ದರೆ ಮುಂದಿನ ಹಾದಿ ಏನಾಗಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷೇತರನಾಗಿ ಸ್ಪರ್ಧೆ ಮಾಡಬೇಕೆಂದು ನಿರ್ಧರಿಸಿದ್ದೇನೆ. ಬಿಜೆಪಿಯಿಂದ ಸ್ಪರ್ಧಿಸಲು ಇನ್ನೂ ಅವಕಾಶವಿದೆ. ಒಂದು ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರಿಗೂ ಮನವಿ ಮಾಡುತ್ತೇನೆ ಎಂದು ಕೋರಿದರು.
ಪಕ್ಷೇತರನಾಗಿ ಸ್ಪರ್ಧಿಸುವುದು ಅಂತಿಮವಾದರೆ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಿತ್ತು. ಆಗ ಸಮಯಾವಕಾಶ ಇರುವುದಿಲ್ಲ. ಹಾಗಾಗಿ ಇಂದು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.
ರಾಜಕಾರಣದಲ್ಲಿ ಏನೂ ಆಗಬಹುದು!
ಟಿಕೆಟ್ ವಿಚಾರವಾಗಿ ಪಕ್ಷದ ವರಿಷ್ಠರು ನನ್ನ ಪರ ಮಾತನಾಡಿದ್ದಾರೆ. ಸ್ವಾಭಾವಿಕವಾಗಿ ಚನ್ನಪಟ್ಟಣ ಕುಮಾರಸ್ವಾಮಿ ಅವರ ಕ್ಷೇತ್ರ. ಅವರ ಒಪ್ಪಿಗೆ ಮುಖ್ಯವೆನಿಸುತ್ತದೆ. ಶುಕ್ರವಾರದವರೆಗೂ ಸಮಯ ಇದೆ. ಕಾಂಗ್ರೆಸ್ ನಿಂದ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿಯವರೆಗೆ ಅಂತಹ ಯಾವುದೇ ಆಲೋಚನೆ ಮಾಡಿಲ್ಲ. ನಾನಿನ್ನು ಬಿಜೆಪಿಯಲ್ಲೇ ಇದ್ದೇನೆ. ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ರಾಜಕಾರಣದಲ್ಲಿ ಏನಾದರೂ ಆಗಬಹುದು ಎಂದು ಹೇಳಿದರು.
ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಕಳೆದ 25 ವರ್ಷಗಳಿಂದ ನಾವು ವಿರೋಧಿಗಳಾಗಿಯೇ ಬಂದವರು. ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ನಮ್ಮ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ. ಜೊತೆಗೆ ಜೆಡಿಎಸ್ ಪಕ್ಷದ ಕಾಯಕರ್ತರೂ ಒಪ್ಪುವುದಿಲ್ಲ. ಬಿಜೆಪಿಯಲ್ಲಿ ಹಿರಿತನದ ಅನುಭವವಿದೆ. ಹಾಗಾಗಿ ಸ್ಪರ್ಧೇಗೆ ಅವಕಾಶ ಕೇಳುತ್ತಿದ್ದೇನೆ ಎಂದು ಹೇಳಿದರು.
ದೇವೇಗೌಡ ನಿವಾಸದಲ್ಲಿ ದಳಪತಿಗಳ ಸಭೆ
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡುತ್ತಿದ್ದಂತೆ ಮೈತ್ರಿ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ಘೋಷಿಸುವ ಕುರಿತು ಮಹತ್ವದ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒಲವು ಹೊಂದಿದ್ದು, ಜೆಡಿಎಸ್ ಪ್ರಮುಖ ನಾಯಕರೊಂದಿಗೆ ಚರ್ಚೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಯೋಗೇಶ್ವರ್ ರಾಜೀನಾಮೆ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿ, ಸಿ.ಪಿ. ಯೋಗೇಶ್ವರ್ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ. ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಬಿ.ವೈ.ರಾಘವೇಂದ್ರ, ಆರ್. ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥನಾರಾಯಣ ಅವರು ಒತ್ತಡ ಹೇರಿದ್ದರು.