Cyclone Fengal | ಬೆಂಗಳೂರು ಸೇರಿ ಐದು ಜಿಲ್ಲೆಗಳಿಗೆ ʼಯೆಲ್ಲೋʼ ಅಲರ್ಟ್‌, ಕರಾವಳಿ-ಮಲೆನಾಡಿನಲ್ಲೂ ಮಳೆ!

Update: 2024-11-30 06:13 GMT
ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ನೆರೆಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚಂಡಮಾರುತದ ಪರಿಣಾಮವಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂಚರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ 24 ತಾಸುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದಲೇ ಅಲ್ಲಲ್ಲಿ ಇಬ್ಬನಿ ಸುರಿದಂತೆ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆ ಕೂಡ ಕೆಲವು ಕಡೆ ತುಂತುರು ಮಳೆಯಾದ ವರದಿಯಾಗಿದೆ. ಚಳಿಗಾಳಿ ಮತ್ತು ದಟ್ಟ ಮೋಡ ಕವಿದ ವಾತಾವರಣವಿದ್ದು, ವಾರಾಂತ್ಯದ ಚಟುವಟಿಕೆಗಳಿಗೆ ತುಸು ಬ್ರೇಕ್ ಬಿದ್ದಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೂಡ ಶನಿವಾರ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ರಾಜ್ಯದ ಕರಾವಳಿ ಪ್ರದೇಶದ ದಕ್ಷಿಣಕನ್ನಡ, ಉಡುಪಿ ಮತ್ತು ಆ ಭಾಗಕ್ಕೆ ಹೊಂದಿಕೊಂಡಿರುವ ಮಡಿಕೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಲ್ಲದೆ, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 3 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಬಗ್ಗೆಯೂ ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಾಲ್ ಚಂಡಮಾರುತವು ತಮಿಳುನಾಡು ಮೂಲಕ ಪಶ್ಚಿಮ-ವಾಯುವ್ಯ ದಿಕ್ಕಿನ ಕಡೆಗೆ ಚಲಿಸುತ್ತಿದ್ದು ಶನಿವಾರ ಮಧ್ಯಾಹ್ನ ತಮಿಳುನಾಡು- ಪುದುಚೇರಿ ಭೂ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸಲಿದ್ದು ಎಂಬ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ರಕ್ಷಣಾ ತಂಡಗಳು ಕರಾವಳಿ ಪ್ರದೇಶದಲ್ಲಿ ಸಜ್ಜಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಕಡಲತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Tags:    

Similar News