87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್!
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿ.20, 21 ಮತ್ತು 22ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ʻʻಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸಬೇಕುʼʼ ಎಂದು ಮನವಿ ಮಾಡಿದರು.
ಮಂಡ್ಯದಲ್ಲಿ ಇದು ಮೂರನೇ ಬಾರಿಗೆ ಅಖಿಲಭಾರತ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 1974ರಲ್ಲಿ 48ನೇ ಸಾಹಿತ್ಯ ಸಮ್ಮೇಳನ ಇಲ್ಲಿ ನಡೆದಿತ್ತು, ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆ ವಹಿಸಿಕೊಂಡಿದ್ದರು. 1994ರಲ್ಲಿ 63ನೇ ಸಾಹಿತ್ಯ ಸಮ್ಮೇಳನ ನಡೆಯಿತು, ಇದರ ಅಧ್ಯಕ್ಷತೆಯನ್ನು ಡಾ.ಚದುರಂಗ ವಹಿಸಿದ್ದರು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆʼʼ ಎಂದರು.
ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.