ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

ವಿಧಾನಸಭೆ ಚುನಾವಣೆಗೂ ಮುನ್ನ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿಯೇ ಭರವಸೆ ನೀಡಿತ್ತು. ಈಗಾಗಲೇ ಎರಡು ವರ್ಷ ವಿಳಂಬವಾಗಿದೆ.;

Update: 2025-07-25 06:00 GMT

ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ನೀಡುವ ಬಗ್ಗೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಿ, ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಆಗಸ್ಟ್ 11 ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ ನೇಮಕವಾಗಿರುವ ಏಕ ಸದಸ್ಯ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ವಸ್ತುನಿಷ್ಠ ವರದಿಯನ್ನು ಜುಲೈ 30 ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸಮಿತಿ ಸಂಚಾಲಕ ಬಸವರಾಜ ಕೌತಾಳ್‌ ಒತ್ತಾಯಿಸಿದರು. 

ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷ  ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿಯೇ ಭರವಸೆ ನೀಡಿತ್ತು. ಈಗಾಗಲೇ ಎರಡು ವರ್ಷ ವಿಳಂಬವಾಗಿದೆ. ಒಳ ಮೀಸಲಾತಿ ಜಾರಿಯಾದರೆ ವಿವಿಧ ಇಲಾಖೆಗಳ 30 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಕೂಲವಾಗಲಿದೆ. ಆದ್ದರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಯೋಜಿಸಲಾಗಿದೆ. ಈ ಧರಣಿಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಒಳ ಮೀಸಲಾತಿ ಸಮೀಕ್ಷೆ ಹಲವು ಅಡೆತಡೆಗಳ ನಡುವೆಯೂ ಗ್ರಾಮೀಣ ಭಾಗದಲ್ಲಿ ಶೇ. 95ಕ್ಕಿಂತ ಹೆಚ್ಚು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50ರಷ್ಟು ಪ್ರಗತಿ ಸಾಧಿಸಿದ್ದು ನಗರ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ.

ಸಮೀಕ್ಷೆಯ ಬಗ್ಗೆಯೂ ಸಾರ್ವಜನಿಕವಾಗಿ ಹಲವಾರು ಆಕ್ಷೇಪಗಳು ವ್ಯಕ್ತವಾಗಿದ್ದವು. ಇದರ ಬಗ್ಗೆ ʼದ ಫೆಡರಲ್‌ ಕರ್ನಾಟಕʼ ಸರಣಿ ಲೇಖನಗಳನ್ನು ಪ್ರಕಟಿಸಿತ್ತು ಹಾಗೂ ಸಂದರ್ಶನಗಳನ್ನು ಪ್ರಸಾರ ಮಾಡಿತ್ತು. 

Tags:    

Similar News