ಪ್ರತಿ ವರ್ಷ ಕನಕ ಉತ್ಸವಕ್ಕೆ ತೀರ್ಮಾನ; 34 ಕೋಟಿ ರೂ. ಕ್ರಿಯಾಯೋಜನೆಗೆ ಅನುಮತಿ
ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವ ಆಚರಿಸಲಾಗುವುದು. ಉತ್ಸವದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶ ಪ್ರತಿಬಿಂಬಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ (ಅ.29) ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿ 34 ಕೋಟಿ ರೂ.ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.
ಪ್ರಾಧಿಕಾರದಲ್ಲಿ ಸಂಚಿತ ನಿಧಿ ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಬೇಕು. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ, ಜನ್ಮಭೂಮಿ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪಾರಂಪರಿಕ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.
ಕಲಾಭವನ ನಿರ್ಮಾಣ
ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ಬಟಾನಿಕಲ್ ಗಾರ್ಡನ್ ನಿರ್ಮಾಣ
ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು.