ಕನ್ನಡ ಅಸ್ಮಿತೆ ಉಳಿವಿಗಾಗಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ದೆಹಲಿಗೆ ನಿಯೋಗ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಡಿ.17 ರಂದು ದೆಹಲಿಗೆ ನಿಯೋಗ ತೆರಳಿ ಬ್ಯಾಂಕಿಂಗ್, ಉದ್ಯೋಗ, ಶಿಕ್ಷಣ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲೂ ಕನ್ನಡದ ಅಸ್ಮಿತೆ ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.;
ಹಿಂದಿ ಭಾಷೆಯನ್ನು ರಾಷ್ಟ್ರಭಾಷೆಯನ್ನಾಗಿ ಪರಿಗಣಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ದಕ್ಷಿಣ ರಾಜ್ಯಗಳಿಂದ ವಿರೋಧ ವ್ಯಕ್ತವಾಗುತ್ತಲೇ ಇದೆ. ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ ಸೇರಿದಂತೆ ಹಲವು ರಾಜ್ಯಗಳು ಬಲವಂತದ ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ ದಾಖಲಿಸಿವೆ. ಈ ಮಧ್ಯೆ ಲೋಕಸಭೆ ಸ್ಫೀಕರ್ ಓಂ ಪ್ರಕಾಶ್ ಬಿರ್ಲಾ ಅವರು ಹಿಂದಿ ದೇಶದ ಆತ್ಮ. ಹೆಗ್ಗುರುತು ಎಂದಿರುವುದು ದಕ್ಷಿಣ ರಾಜ್ಯಗಳ ಅಸಮಾಧಾನಕ್ಕೆ ಕಾರಣವಾಗಿದೆ.
ನಿಜವಾಗಿಯೂ ದೇಶದ ಅಸ್ಮಿತೆಯಾಗಿರುವ ಕ್ಲಾಸಿಕಲ್ ಭಾಷೆಗಳ ಪ್ರಾಮುಖ್ಯತೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಸಲುವಾಗಿ ಇದೀಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕೊಂಡೊಯ್ಯಲು ನಿರ್ಧರಿಸಿದೆ.
ಹಿಂದಿ ಹೇರಿಕೆಯಿಂದ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಇದು ಸರಿಯಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಡಿ.17 ರಿಂದ 19 ರ ಅವಧಿಯಲ್ಲಿ ದೆಹಲಿಗೆ ನಿಯೋಗ ತೆರಳಲಿದ್ದು, ಆ ವೇಳೆ ಬ್ಯಾಂಕಿಂಗ್, ಉದ್ಯೋಗ, ಶಿಕ್ಷಣ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲೂ ಕನ್ನಡದ ಅಸ್ಮಿತೆ ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೇಳಿದೆ.
ನಿಯೋಗದ ಬೇಡಿಕೆಗಳೇನು?
ಗ್ರಾಮೀಣ ಬ್ಯಾಂಕುಗಳ ವಿಲೀನದ ನೆಪದಲ್ಲಿ ಕನ್ನಡ ಅಸ್ಮಿತೆಯ ಕಡೆಗಣನೆ, ಸ್ಥಳೀಯರಿಗೆ ಉದ್ಯೋಗ ವಂಚನೆ ನಿಲ್ಲಿಸಬೇಕು, ಬ್ಯಾಂಕ್ ಆಡಳಿತದಲ್ಲಿ ಕನ್ನಡ ಭಾಷೆ ಬಳಕೆ, ಕನ್ನಡದಲ್ಲೇ ಪ್ರಾಥಮಿಕ ಶಿಕ್ಷಣ, ದೆಹಲಿಯ ಜೆ.ಎನ್.ಯು ನಲ್ಲಿ ಕನ್ನಡ ಪೀಠದ ಬಲವರ್ಧನೆ, ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರದ ಕಾರ್ಯ ನಿರ್ವಹಣೆ, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ಹಾಗೂ ನ್ಯಾಯಾಲಯಗಳಲ್ಲಿ ಪ್ರಾದೇಶಿಕ ಭಾಷೆಯ ತೀರ್ಪುಗಳ ಪ್ರಾಮುಖ್ಯತೆ ಸೇರಿದಂತೆ ಹಲವು ಬೇಡಿಕೆಗಳನ್ನು ನಿಯೋಗವು, ಕೇಂದ್ರ ಸಚಿವರ ಗಮನಕ್ಕೆ ತಂದು ಪರಿಹಾರಕ್ಕೆ ಆಗ್ರಹಿಸಲಿದೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ನಿಯೋಗವು ಕರ್ನಾಟಕದ ಸಂಸದರನ್ನೂ ಭೇಟಿ ಮಾಡಿ ಕನ್ನಡ ಭಾಷೆ, ಸಂಸ್ಕೃತಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.
ನಿಯೋಗದಲ್ಲಿ ಯಾರಿರಲಿದ್ದಾರೆ?
ಪ್ರಾಧಿಕಾರದ ನಿಯೋಗದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಂಸದ ಡಾ.ಎಲ್.ಹನುಮಂತಯ್ಯ, ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ, ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ.ವಿ.ಪಿ.ನಿರಂಜನಾರಾಧ್ಯ, ಡಾ.ಎ.ಬಿ.ರಾಮಚಂದ್ರಪ್ಪ, ದಾಕ್ಷಾಯಿಣಿ ಹುಡೇದ ನಿಯೋಗದಲ್ಲಿ ಇರಲಿದ್ದಾರೆ.