ಮೆಣಸಿನಕಾಯಿ ಬೆಲೆ ಕುಸಿತ: ಆಂಧ್ರ ಪ್ರದೇಶದ ಮಾದರಿ ಅನುಸರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

ಆಂಧ್ರಪ್ರದೇಶದಲ್ಲಿ ಪ್ರತಿ ಕ್ವಿಂಟಾಲ್‌ಗೆ 11ಸಾವಿರದ 880 ರೂಪಾಯಿಗಳನ್ನು ನಿಗದಿ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ.;

Update: 2025-03-20 00:30 GMT

ರಾಜ್ಯದಲ್ಲಿ ಮೆಣಸಿನಕಾಯಿ ಬೆಲೆ ಕುಸಿತವಾಗಿದ್ದು ರಾಜ್ಯಸರ್ಕಾರ ಕೂಡಲೇ ಆಂಧ್ರ ಪ್ರದೇಶದ ಮಾದರಿಯಲ್ಲಿ ಮಧ್ಯಪ್ರವೇಶಿಸಿ ಪರಿಹಾರ ನೀಡಬೇಕೆಂದು ಶಾಸಕರು ವಿಧಾನಸಭೆಯಲ್ಲಿ ಪಕ್ಷಬೇಧ ಮರೆತು ಆಗ್ರಹಿಸಿದ್ದಾರೆ.

ಬುಧವಾರ ಸದನದಲ್ಲಿ ಆಡಳಿತ ಪಕ್ಷದ ಶಾಸಕ ಜೆ.ಎನ್.ಗಣೇಶ್ ವಿಷಯ ಪ್ರಸ್ತಾಪಿಸುತ್ತ, ಮೆಣಸಿನಕಾಯಿ ಬೆಲೆ 2022ರಲ್ಲಿ ಪ್ರತಿ ಕ್ವಿಂಟಾಲ್‌ಗೆ 40 ಸಾವಿರ ರೂಪಾಯಿಗಳಿತ್ತು. ಈಗ ಅದು ಏಳೆಂಟು ಸಾವಿರ ರೂಪಾಯಿಗೆ ಕುಸಿತವಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದಲ್ಲಿ ಪ್ರತಿ ಕ್ವಿಂಟಾಲ್‌ಗೆ 11ಸಾವಿರದ 880 ರೂಪಾಯಿಗಳನ್ನು ನಿಗದಿ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದ ಸಂಸದರು ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಈವರೆಗೂ ಈ ನಿಟ್ಟಿನಲ್ಲಿ ಯಾವುದೇ ಪ್ರಕ್ರಿಯೆಗಳು ಆರಂಭವಾಗಿಲ್ಲ. ಕೂಡಲೇ ರಾಜ್ಯಸರ್ಕಾರ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸದಸ್ಯ ಜನಾರ್ಧನರೆಡ್ಡಿ ಮಾತನಾಡಿ, ಮೆಣಸಿನಕಾಯಿ ಬೆಲೆ ಕುಸಿತದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೆಣಸಿನಕಾಯಿಯೇ ಪ್ರಮುಖ ಬೆಳೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರಿಗೆ ನೆರವು ಕೊಡಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿಗೆ ಹೆಚ್ಚು ಅನುದಾನ ನೀಡಲಾಗುತ್ತಿದ್ದು, ಅದರಲ್ಲಿ ಶೇಕಡ 10 ರಷ್ಟನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags:    

Similar News