ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆಗೆ ಹೈಕೋರ್ಟ್ ತಡೆ; ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಪೊಲೀಸ್ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಅಕ್ರಮಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆ ನೀಡಿರುವ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೇಲ್ಮನವಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಬೇಕೆ ಅಥವಾ ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕೆ ಎಂಬುದರ ಕುರಿತು ಕಾನೂನು ತಂಡದೊಂದಿಗೆ ಸಮಾಲೋಚಿಸಿ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಆದೇಶದ ಪ್ರತಿಯನ್ನು ಪೊಲೀಸರು ಪಡೆದಿದ್ದಾರೆ. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು. ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಹೇಳಿದರು.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿನ ನ್ಯಾಯಿಕ ವಿಚಾರಣೆ ಕೈ ಬಿಡುವಂತೆ ಕೋರಿ ಸೌಜನ್ಯಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ ಗೌಡ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ವಿರುದ್ಧ ಬಿಎನ್‌ಎಸ್ ಕಲಂ 211(ಎ) 336, 230, 231, 229, 228, 240, 236, 233 ಮತ್ತು 248ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಎಸ್‌ಐಟಿ ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಸಂಗತಿಗಳನ್ನು ಮತ್ತು ಸಂದರ್ಭಗಳನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ನಿಮ್ಮನ್ನು ವಿಚಾರಿಸುವುದು ಅಗತ್ಯವಾಗಿದೆ ಎಂಬುದು ಕಂಡುಬಂದಿರುತ್ತದೆ. ಆದ ಕಾರಣ ನೀವು 27ರ ಅಕ್ಟೋಬರ್ 2025 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಬಂದು ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಿದ್ದರು.
'ಒಂದು ವೇಳೆ ನೀವು ನೋಟೀಸಿನಲ್ಲಿ ನೀಡಿರುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಪಾಲನೆ ಮಾಡದೇ ಅಥವಾ ಹಾಜರಾಗದೇ ಹೋದಲ್ಲಿ ನಿಮ್ಮನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 35(6) ಅಡಿಯಲ್ಲಿ ದಸ್ತಗಿರಿ ಕ್ರಮ ಕೈಗೊಳ್ಳಲಾಗುವುದು' ಎಂದೂ ಅವರು ನೋಟಿಸ್‌ನಲ್ಲಿ ಎಚ್ಚರಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.