ಧರ್ಮಸ್ಥಳ ಪ್ರಕರಣ| ಮಹೇಶ್ ತಿಮರೋಡಿ ಸೇರಿ ಐವರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ ಚಿನ್ನಯ್ಯ
ಜೈಲಿನಿಂದ ಚಿನ್ನಯ್ಯ ಹೊರಬರುತ್ತಲೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ತನಗೂ ಹಾಗೂ ತನ್ನ ಪತ್ನಿಗೂ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಆರು ಮಂದಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ತನಿಖಾ ವರದಿ ಸಲ್ಲಿಸಿದೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಕೂಡಲೇ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಐವರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ.
ನಾಲ್ಕು ತಿಂಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದ ಚಿನ್ನಯ್ಯಗೆ ನ.24ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ 12 ಷರತ್ತುಗಳೊಂದಿಗೆ ಜಾಮೀನು ನೀಡಿದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ಬಿಡುಗಡೆ ಪ್ರಕ್ರಿಯೆ ವಿಳಂಬವಾಗಿತ್ತು. ಬಳಿಕ ಚಿನ್ನಯ್ಯಗೆ ತನ್ನ ಇದೀಗ ಪತ್ನಿಯೇ ಸಂಬಂಧಿಕರ ಮೂಲಕ ಬಾಂಡ್ ಹಣ ಹೊಂದಿಸಿದ ಬಳಿಕ ಜೈಲಿನಿಂದ ಬಿಡುಗಡೆ ಆಗಿದ್ದ.
ಜೈಲಿನಿಂದ ಚಿನ್ನಯ್ಯ ಹೊರಬರುತ್ತಲೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ತನಗೂ ಹಾಗೂ ತನ್ನ ಪತ್ನಿಗೂ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ. ವಿರುದ್ಧ ದೂರು ದಾಖಲಿಸಿದ್ದಾರೆ.
ಪೊಲೀಸರ ರಕ್ಷಣೆಗಾಗಿ ಮನವಿ
ಧರ್ಮಸ್ಥಳ ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ಈ ಐವರು ಹೋರಾಟಗಾರರಿಂದ ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಹೀಗಾಗಿ ಪೊಲೀಸ್ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಧರ್ಮಸ್ಥಳ ಪೊಲೀಸರು ದೂರು ಸ್ವೀಕರಿಸಿ, ಬೆಳ್ತಂಗಡಿ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಿಸಲು ಸೂಚಿಸಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ತನಿಖೆ ಆರಂಭಿಸಿದ ಪೊಲೀಸರು
ಪ್ರಕರಣದ ಗಂಭೀರತೆ ಮನಗಂಡ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಆರಂಭಿಸಿದ್ದಾರೆ. ಆ ಮೂಲಕ ಧರ್ಮಸ್ಥಳ ಪ್ರಕರಣವು ಹೊಸ ಹಂತಕ್ಕೆ ಕಾಲಿಟ್ಟಿದೆ. ಪ್ರಕರಣದ ಪ್ರಮುಖ ದೂರುದಾರನೇ ಇದೀಗ ಸೌಜನ್ಯ ಪರ ಹೋರಾಟಗಾರರ ದೂರು ನೀಡಿರುವುದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.