ಧರ್ಮಸ್ಥಳ ಪ್ರಕರಣ | ನಾವು ನ್ಯಾಯದ ಪರ, ಧರ್ಮದಲ್ಲಿ ರಾಜಕೀಯ ಬೇಡ; ಡಿಸಿಎಂ ಡಿಕೆಶಿ
ಬಿಜೆಪಿಯವರು ಇದುವರೆಗೂ ಏನೂ ಮಾತನಾಡಿರಲಿಲ್ಲ. ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದರು. ನಾನು 'ಷಡ್ಯಂತ್ರ'ದ ವಿಚಾರ ಪ್ರಸ್ತಾಪ ಮಾಡಿದ ನಂತರ ಮಾತನಾಡಲು ಆರಂಭಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.;
ಡಿಸಿಎಂ ಡಿ.ಕೆ. ಶಿವಕುಮಾರ್
"ನಾವು ಯಾರ ಪರವೂ ಇಲ್ಲ, ನ್ಯಾಯದ ಪರವಾಗಿದ್ದೇವೆ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನ ಬಂಧನವಾಗಿದೆ.
ಬಿಜೆಪಿಯವರು ಇದುವರೆಗೂ ಏನೂ ಮಾತನಾಡಿರಲಿಲ್ಲ. ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದರು. ನಾನು 'ಷಡ್ಯಂತ್ರ'ದ ವಿಚಾರ ಪ್ರಸ್ತಾಪ ಮಾಡಿದ ನಂತರ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಧರ್ಮಸ್ಥಳದ ಕುಟುಂಬದವರೇ ಬಂದು ಮುಖ್ಯಮಂತ್ರಿ ಬಳಿ ಮಾತನಾಡಿ, ನೀವು ಎಸ್ ಐಟಿ ರಚನೆ ಮಾಡಿರುವುದು ಒಳ್ಳೆಯ ಕೆಲಸ ಎಂದಿದ್ದಾರೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಯವರು, ಗೃಹ ಸಚಿವರು ಸದನದಲ್ಲಿ ಹಾಗೂ ಸಿಎಲ್‌ಪಿ ಸಭೆಯಲ್ಲೂ ತಿಳಿಸಿದ್ದಾರೆ" ಎಂದರು.
ಧರ್ಮಸ್ಥಳ ಪ್ರಕರಣದಲ್ಲಿ ಅನನ್ಯಾ ಭಟ್ ನನ್ನ ಮಗಳೇ ಅಲ್ಲ ಎಂದು ಸುಜಾತ ಭಟ್ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, "ಇದನ್ನು ಗೃಹಸಚಿವರು ನೋಡಿಕೊಳ್ಳುತ್ತಾರೆ" ಎಂದರು.
ಎಐಸಿಸಿ ರಾಜ್ಯ ಉಸ್ತವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗಿನ ಸಭೆಯ ಬಗ್ಗೆ ಕೇಳಿದಾಗ, "ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಬೇಕಲ್ಲವೇ? ಆದ ಕಾರಣ ಸಭೆ ಕರೆದು ಜವಾಬ್ದಾರಿ ಹಂಚಿಕೆ ಮಾಡುತ್ತಿದ್ದೇವೆ. ನ್ಯಾಯಾಲಯ ಚುನಾವಣೆ ನಡೆಸಿ ಎಂದ ಮೇಲೆ ಕಡೆಗಣಿಸಬಾರದಲ್ಲವೇ?" ಎಂದರು.
ಜನಾಧಿಕಾರ ಯಾತ್ರೆಯಲ್ಲಿ ಭಾಗಿ
"ಬಿಹಾರದಲ್ಲಿ ಕಾಂಗ್ರೆಸ್ ಜನಾಧಿಕಾರ ಯಾತ್ರೆ ನಡೆಯುತ್ತಿದೆ. ಅದನ್ನು ಪಕ್ಷದ ಶಾಸಕರು ನೋಡಬೇಕು ಎಂದರು, ಅದಕ್ಕಾಗಿ ತೆರಳುತ್ತಿದ್ದೇವೆ. ಮುಖ್ಯಮಂತ್ರಿಗಳನ್ನೂ ಆಹ್ವಾನ ಮಾಡಿದ್ದು ಅವರೂ ಸಹ ಬೇರೊಂದು ದಿನ ತೆರಳುತ್ತಿದ್ದಾರೆ" ಎಂದು ತಿಳಿಸಿದರು.