ಮಾಜಿ ಸಿಎಂ ಎಸ್​ ಎಂ. ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ; ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.;

Update: 2024-12-10 04:35 GMT

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನಾಳೆ ಅಂತಿಮ ಸಂಸ್ಕಾರ

ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ಬಿಜೆಪಿ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಹಲವು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಇದ್ದವರು. ಬೆಂಗಳೂರನ್ನು ಐ.ಟಿ-ಬಿ.ಟಿ. ಹಬ್ ಆಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ವಿಜಯೇಂದ್ರ ಪ್ರಾರ್ಥಿಸಿದ್ದಾರೆ.

ಕರ್ನಾಟಕ ಕಂಡಂತಹ ಧಿಮಂತ, ಹಿರಿಯ ರಾಜಕಾರಣಿ, ನಮ್ಮ ಕನ್ನಡದ ಹೆಮ್ಮೆಯಾಗಿದ್ದ ಎಸ್.ಎಂ. ಕೃಷ್ಣ ನಿದನದ ಸುದ್ದಿ ಕೇಳಿ ನನಗೆ ಬಹಳಷ್ಟು ದುಃಖವಾಗಿದೆ. ಒಬ್ಬ ಹಿರಿಯರು, ಮಾರ್ಗದರ್ಶಕರು ಹಿತಚಿಂತಕರನ್ನು ಕಳೆದುಕೊಂಡಂತಹ ಭಾವನೆ ನನಗೆ ಬರುತ್ತಿದೆ. ರಾಜ್ಯ ಅವರನ್ನು ಕಳೆದುಕೊಂಡು ಬಹಳ ಬಡವಾಗಿದೆ. ಅತ್ಯಂತ ಪರಿಶುದ್ಧ ಬದುಕನ್ನು ನಡೆಸಿದವರು ಎಸ್.ಎಂ. ಕೃಷ್ಣ ಅವರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ,ಧಕ್ಷ ಆಡಳಿತಗಾರ, ಚಿಂತಕ ಅಭಿವೃದ್ದಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ. ರಾಜ್ಯ ಹಾಗೂ ದೇಶದ ರಾಜಕಾರಣಕ್ಕೆ ಇದು ತುಂಬಲಾರದ ನಷ್ಟ. ರಾಜ್ಯದ ಅಭಿವೃದ್ದಿಗೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ. ಅವರು ಅನೇಕ ಸವಾಲುಗಳನ್ನು ದಿಟ್ಟವಾಗಿ ನಿಭಾಯಿಸಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದ ಧೀಮಂತ ನಾಯಕ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಅಜಾತಶತ್ರು, ನಾಡು ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ಸಾವಿನಿಂದ ದುಃಖಿತನಾಗಿದ್ದೇನೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾನು ಮೊದಲ ಬಾರಿಗೆ ಮಾನ್ವಿ ಕ್ಷೇತ್ರದ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದಾಗ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ರಾಜ್ಯ ಮತ್ತು ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ಎಸ್ ಎಂ ಕೃಷ್ಣ ಅವರು ನಾಡಿಗೆ, ದೇಶಕ್ಕೆ ಸಲ್ಲಿಸಿರುವ ಸೇವೆ ಅಪಾರ. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ಕೊಡುಗೆ ಅನುಪಮವಾಗಿದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್ ಎಂ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.

ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಎಸ್.ಎಂ.ಕೆ ನಿಧನದಿಂದ ರಾಜ್ಯ ಒಬ್ಬ ಧೀಮಂತ ರಾಜಕಾರಣಿ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ, ಹಿರಿಯ ಮುತ್ಸದ್ದಿ, ಶ್ರೀ ಎಸ್ಎಂ ಕೃಷ್ಣ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಇಹಲೋಕವನ್ನು ತ್ಯಜಿಸಿದ ಅವರಾತ್ಮಕ್ಕೆ ಭಗವಂತ ಮೋಕ್ಷ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ದುಃಖವನ್ನು ಸೈರಿಸುವ ಶಕ್ತಿ ಅವರ ಕುಟುಂಬ ಮಿತ್ರ ವರ್ಗಕ್ಕೆ , ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಸಿ.ಟಿ. ರವಿ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇಶದ ಧೀಮಂತ ಮುತ್ಸದ್ಧಿ, ನಾಡಿನ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ನನಗೆ ಅಪಾರ ನೋವು ತಂದಿದೆ ಎಂದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ. ಬೆಂಗಳೂರು ನಗರವು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗುರುತಾಗುವಲ್ಲಿ ಎಸ್ ಎಂ ಕೃಷ್ಣ ಅವರ ಶ್ರಮ ಅಪಾರ. ಅತ್ಯುತ್ತಮ ಆಡಳಿತಗಾರರಾಗಿದ್ದ ಸನ್ಮಾನ್ಯರು ತನ್ನ ಸನ್ನಡತೆ, ಸುಸಂಸ್ಕೃತ ವ್ಯಕ್ತಿತ್ವದಿಂದ ಸದಾ‌ ನೆನಪಿನಲ್ಲಿ ಉಳಿಯುತ್ತಾರೆ. ಇಪ್ಪತ್ತು ವರ್ಷಗಳ ಹಿಂದೆ ಎಸ್ ಎಂ ಕೃಷ್ಣ ಅವರ ವಿರುದ್ಧ ನಾನು ಚಾಮರಾಜಪೇಟೆ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದೆ. ರಾಜಕೀಯವಾಗಿ ನಾವು ಬೇರೆ ಬೇರೆ ದಿಕ್ಕಿನಲ್ಲಿದ್ದರೂ ಎಸ್ ಎಂ ಕೃಷ್ಣರವರು ಒಬ್ಬ ಒಳ್ಳೆಯ ಹಿರಿಯ ಸ್ನೇಹಿತರಾಗಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ನೋವು ನೀಗಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗದ ಸಭೆ, ಔತಣಕೂಟ ಮುಂದಕ್ಕೆ

ಬೆಳಗಾವಿಯ ಶೂನ್ಯ ರೇಸಾರ್ಟ್​​ನಲ್ಲಿ ಡಿಸೆಂಬರ್ 10ರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಇಂದು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖದ ಸಂದರ್ಭದಲ್ಲಿ ಕೆಪಿಸಿಸಿ ವತಿಯಿಂದ ಸಂತಾಪ ಸಭೆಯನ್ನು ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ.

Tags:    

Similar News