ಚಲೋ ದಿಲ್ಲಿ| ದೆಹಲಿಯಲ್ಲಿ ಪ್ರತಿರೋಧದ ಕಹಳೆ ಮೊಳಗಿಸಿದ ಕರ್ನಾಟಕ

ಅನುದಾನ ಹಂಚಿಕೆಯಲ್ಲಿ ಕೇಂದ್ರ ರಾಜ್ಯ ಸರ್ಕಾರಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯಲ್ಲಿ ಧರಣಿ ಆರಂಭಿಸಿದೆ.

Update: 2024-02-07 07:00 GMT
ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‌ ನಾಯಕರು, ಫೋಟೋ: X

ಹೊಸದಿಲ್ಲಿ: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ  ಸರ್ಕಾರ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿ ಆರಂಭಿಸಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಪಕ್ಷಾತೀತವಾಗಿ ಪ್ರತಿಭಟನೆ ಆಯೋಜಿಸುವ ಉದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಭಟನೆಗೆ ಆಹ್ವಾನ ನೀಡಿದ್ದರಾದರೂ, ಅವರು ಯಾರೂ ಭಾಗಿಯಾಗಿಲ್ಲ. ʼನಮ್ಮ ತೆರಿಗೆ ನಮ್ಮ ಹಕ್ಕುʼ ಎಂಬ ಫಲಕಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಐದು ವರ್ಷಗಳಲ್ಲಿ ಉಂಟಾಗಿರುವ 1.87 ಲಕ್ಷ ಕೋಟಿ ರೂ.ಗಳ ನಷ್ಟವನ್ನು ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ನಾವು ಕರ್ನಾಟಕ ರಾಜ್ಯದ ಹಿತವನ್ನು ಕಾಪಾಡಬೇಕು. ಕರ್ನಾಟಕ ರಾಜ್ಯ ಹಾಗೂ ದಕ್ಷಿಣ ಭಾರತ ರಾಜ್ಯಗಳ ಬಗ್ಗೆ ಭಾರತ ಸರ್ಕಾರವು ತಾರತಮ್ಯ ಎಸಗುತ್ತಿದೆ. ಈ ಬಗ್ಗೆ ಜನರ ಗಮನವನ್ನೂ ಸೆಳೆಯಬೇಕು, ಈ ಅನ್ಯಾಯ ಮುಂದುವರಿಯಬಾರದು. ಅದಕ್ಕಾಗಿ ಈ ಚಳುವಳಿ ಆರಂಭಿಸಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ತಾರತಮ್ಯ, ಅನುದಾನ ಹಂಚಿಕೆಯಲ್ಲಿ ಮೋಸ, ನೀರಾವರಿ ಯೋಜನೆಗಳಿಗೆ ಅನುಮತಿ ನಿರಾಕರಣೆ, ವಿಶೇಷ ಅನುದಾನಕ್ಕೆ ಅಡ್ಡಗಾಲು ಹಾಕಿ ಕನ್ನಡಿಗರಿಗೆ ಮೇಲೆ ಸಾಲು ಸಾಲು ದ್ರೋಹ ಎಸಗಿದೆ. ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ಕೇಂದ್ರ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇರಳದ ಆಡಳಿತರೂಢ ಎಲ್‌ಡಿಎಫ್‌ ಮೈತ್ರಿಕೂಟವು ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದು, ಈ ಪ್ರತಿಭಟನೆಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. 

Tags:    

Similar News