Caste Census | ಒಳಮೀಸಲಾತಿ ಜಾರಿ: ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ ಜಾರಿಗೆ ಸರ್ಕಾರದ ವಿರೋಧವಿಲ್ಲ. ಆದರೆ ಅದರ ಜಾರಿಯ ಕುರಿತು ಪಕ್ಷದ ವರಿಷ್ಠರು ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Update: 2024-10-05 10:17 GMT
ಸಿದ್ದರಾಮಯ್ಯ

ಒಳ ಮೀಸಲಾತಿ ಜಾರಿಗೆ ಸರ್ಕಾರದ ವಿರೋಧವಿಲ್ಲ. ಆದರೆ ಅದರ ಜಾರಿಯ ಕುರಿತು ಪಕ್ಷದ ವರಿಷ್ಠರು ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ  ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂತರಾಜು ಆಯೋಗದ ಜಾತಿಗಣತಿ ವರದಿ ಬಹಿರಂಗಪಡಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ವರದಿಯಲ್ಲಿ ಕೆಲ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿ ಜನರ ಮುಂದಿಡುತ್ತೇವೆ

ರಾಜ್ಯ ಕಾಂಗ್ರೆಸ್ಸಿನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪ ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪ ಮಾಡಿದರೆ, ವಸ್ತುಸ್ಥಿತಿಯನ್ನು ನಾವು ಜನರ ಮುಂದಿಡುತ್ತೇವೆ ಎಂದು ಹೇಳಿದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ

ಜೆಡಿಎಸ್ ಕಾರ್ಯಾಧ್ಯಕ್ಷ ಜಿ.ಟಿ.ದೇವೇಗೌಡ ಅವರು, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ ವಿರೋಧ ಪಕ್ಷದವರು ಪಾದಯಾತ್ರೆ ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರೂ ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಮೇಲೆ ಎಫ್ ಐ ಆರ್ ಆಗಿರುವುದರಿಂದ, ತಾನು ರಾಜೀನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜೀನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಅವರು ಮೊದಲು ರಾಜೀನಾಮೆ ನೀಡಲಿ ಎಂದರು.

ಕರ್ನಾಟಕ ಸಂಭ್ರಮ

ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ, ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳ ಸಂದಿರುವ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ. ಗೋಕಾಕ್ ಚಳವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮ ಇದಾಗಿದೆ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ನೀರು ಬಿಡಲು ಶೀಘ್ರ ಕ್ರಮ

ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಜಲಾಶಯವು 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮ ತೆಗೆದುಕೊಳ್ಳಲಿದೆ ಎಂದರು.

Tags:    

Similar News