ಸಂಪುಟ ಪುನಾರಚನೆ ; ಸಿಎಂ ಆಪ್ತ ಸಚಿವರಿಂದ ರಹಸ್ಯ ಸಭೆ
ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು, ರಹಸ್ಯ ಸಭೆಗಳು ಮತ್ತೆ ಆರಂಭವಾಗಿವೆ. ಹೈಕಮಾಂಡ್ ಎಚ್ಚರಿಕೆಗೂ ಕಿವಿಗೊಡದ ಹಲವು ಶಾಸಕರು ಸಿಎಂ ಹಾಗೂ ಡಿಸಿಎಂ ಪರ ಹೇಳಿಕೆ ನೀಡಲು ಆರಂಭಿಸಿದ್ದಾರೆ.
ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದ ಮೂವರು ಹಿರಿಯ ಸಚಿವರು ಗುರುವಾರ ರಹಸ್ಯ ಸಭೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದ ಸಮೀಪವಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ರಹಸ್ಯ ಸಭೆ ನಡೆಸಿರುವುದು ಇದೀಗ ನಾನಾ ರಾಜಕೀಯ ಚರ್ಚೆಗಳಿಗೆ ಆಸ್ಪದ ನೀಡಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಕೇಳಿಬರುತ್ತಿರುವುದರಿಂದ ಈ ಮೂವರು ಸಚಿವರ ರಹಸ್ಯ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಒಂದು ವೇಳೆ ಸಿಎಂ ಸ್ಥಾನ ಬದಲಾವಣೆಯಾದರೆ ಸಿದ್ದರಾಮಯ್ಯ ಅವರ ಆಪ್ತ ಬಳಗದವರನ್ನೇ ಆಯ್ಕೆ ಮಾಡಬೇಕು. ಪಕ್ಷದಲ್ಲಿರುವ ʼಒಬ್ಬರಿಗೆ ಒಂದೇ ಹುದ್ದೆʼ ನಿಯಮ ಪಾಲನೆ ಮಾಡಬೇಕು ಎಂಬ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಇದೇ ಬೇಡಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಈ ಹಿಂದೆ ಹೈಕಮಾಂಡ್ ನಾಯಕರಿಗೆ ಸಲ್ಲಿಸಿದ್ದರು.
ʼನವೆಂಬರ್ ಕ್ರಾಂತಿʼ ಹಿನ್ನೆಲೆ ಸಭೆ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನವೆಂಬರ್ ತಿಂಗಳಿಗೆ ಎರಡೂವರೆ ವರ್ಷ ಪೂರ್ಣಗೊಳಿಸಲಿದ್ದಾರೆ. ಸರ್ಕಾರ ರಚನೆಯ ಸಂದರ್ಭದಲ್ಲಿ ನಡೆದಿತ್ತು ಎನ್ನಲಾದ ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದದಂತೆ ನವೆಂಬರ್ ತಿಂಗಳಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಯಬೇಕಾಗುತ್ತದೆ.
ನಾಯಕತ್ವ ಹಾಗೂ ಸಿಎಂ ಸ್ಥಾನ ಬದಲಾವಣೆ ಕುರಿತಂತೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು. ಅದರ ಹೊರತಾಗಿಯೂ ಸ್ವಪಕ್ಷಿಯ ಶಾಸಕರು ʼನವೆಂಬರ್ ಕ್ರಾಂತಿʼಯ ಹೇಳಿಕೆ ನೀಡಿರುವುದರಿಂದ ಚರ್ಚೆ ಮುನ್ನೆಲೆಗೆ ಬಂದಿದೆ.
ಸಿಎಂ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಪ್ರತಿ ಬಾರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿದ್ದರು. ಈಗ ಎರಡೂವರೆ ವರ್ಷ ಅವಧಿ ಪೂರ್ಣವಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಅವರು ಎರಡು ಮೂರು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಬಂದಿದ್ದಾರೆ. ಎಐಸಿಸಿ ಪರವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಕೆಶಿ ಅವರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದರೆ, ಮುಂದೆ ಯಾವ ರೀತಿ ಹೆಜ್ಜೆ ಇಡಬೇಕು. ʼನವೆಂಬರ್ ಕ್ರಾಂತಿʼಗೆ ಪರ್ಯಾಯವಾಗಿ ಯಾವೆಲ್ಲಾ ನಿರ್ಧಾರ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಬುಧವಾರವಷ್ಟೇ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟ ಹೇಳಿಕೆ ನೀಡುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದರು.
ಡಿಕೆಶಿ ಪಾಳಯದಲ್ಲಿ ಆತಂಕ
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮೂವರು ಸಚಿವರ ರಹಸ್ಯ ಸಭೆಯು ಡಿಸಿಎಂ ಡಿ.ಕೆ ಶಿವಕುಮಾರ್ ಪಾಳಯದಲ್ಲಿ ತೀವ್ರ ಆತಂಕ ಮೂಡಿಸಿದೆ.
ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮ ಆಪ್ತರಾದ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ, ಕುಣಿಗಲ್ ಶಾಸಕ ಡಾ.ರಂಗನಾಥ್ ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮೂಲಕ ಸಿಎಂ ಬದಲಾವಣೆ ಕುರಿತ ಹೇಳಿಕೆ ಕೊಡಿಸುತ್ತಿದ್ದು, ಚರ್ಚೆಯನ್ನು ಜೀವಂತವಾಗಿ ಇರಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ವಿಧಾನಸಭೆ ಅಧಿವೇಶನದಲ್ಲಿ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲು ನನ್ನ ಶ್ರಮ ಹೆಚ್ಚಿದೆ ಎಂದು ಹೇಳಿಕೆ ನೀಡುವ ಮೂಲಕ ಸಿಎಂ ರೇಸ್‌ನಲ್ಲಿ ನಾನಿದ್ದೇನೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದರು.
ದಲಿತ ಸಿಎಂ ಮತ್ತೆ ಮುನ್ನೆಲೆಗೆ ?
ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ದಲಿತ ನಾಯಕರನ್ನೇ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರದಲ್ಲಿ ಈಗಾಗಲೇ ದಲಿತ ಸಚಿವರು, ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸುವ ಮಾತುಗಳು ಕೂಡ ಕೇಳಿ ಬರುತ್ತಿವೆ.
ಇತ್ತೀಚೆಗೆ ಸಚಿವ ಡಾ.ಜಿ ಪರಮೇಶ್ವರ್ ನಿವಾಸದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಚಿವರು, ಶಾಸಕರಿಗೆ ಭೋಜನಕೂಟ ಏರ್ಪಡಿಸಲಾಗಿತ್ತು. ಆದರೆ, ಔತಣಕೂಟ ಸಭೆಗೆ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮೂಲಕ ತಡೆಯೊಡ್ಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸಿಎಂ ಆಪ್ತ ಬಳಗದ ಸಚಿವರು ಡಿ.ಕೆ. ಶಿವಕುಮಾರ್ ಅವರನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ʼನವೆಂಬರ್ ಕ್ರಾಂತಿʼ ಮಾತುಗಳು ಕೇಳಿ ಬರುತ್ತಿರುವುದರಿಂದ ದಲಿತ ಸಿಎಂ ವಿಚಾರ ಚರ್ಚೆಗೆ ಬಂದಿದೆ.