Congress Infighting | ತೀವ್ರಗೊಂಡ ಕಾಂಗ್ರೆಸ್ ಭಿನ್ನಮತ: ಸಿಎಂ ಆಪ್ತ ಸಚಿವರಿಂದ ಹೈಕಮಾಂಡ್ ಭೇಟಿ
ವರಿಷ್ಠರ ಎಚ್ಚರಿಕೆ ಬಳಿಕ ಸುಮ್ಮನಾಗಿದ್ದ ಸಿಎಂ ಆಪ್ತ ವಲಯದ ಸಚಿವರು ದಿಢೀರ್ ದೆಹಲಿ ಯಾತ್ರೆ ಕೈಗೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.;
ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಮುಖ್ಯಮಂತ್ರಿ ಬದಲಾವಣೆ ವಿಚಾರ ದೆಹಲಿಗೆ ಸ್ಥಳಾಂತರವಾಗಿದೆ.
ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ಎಚ್ಚರಿಕೆ ನೀಡಿದ್ದರಿಂದ ಕೆಲ ದಿನಗಳ ಕಾಲ ಸುಮ್ಮನಾಗಿದ್ದ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಡಾ.ಜಿ. ಪರಮೇಶ್ವರ್ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ದಿಢೀರ್ ದೆಹಲಿಗೆ ದೌಡಾಯಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸೋಮವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ ಯಾವೆಲ್ಲಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಇರುವಾಗಲೇ ಬುಧವಾರ ಸಹಕಾರ ಸಚಿವ ಕೆ.ಎನ್. ರಾಜಣ್ಣ ಕೂಡ ತೆರಳಿರುವುದು ರಾಜಕೀಯ ಚರ್ಚೆಗಳಿಗೆ ಆಸ್ಪದ ನೀಡಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಕಳೆದ ಆರು ತಿಂಗಳಿಂದ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದವು. ಇದೇ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ಪರವಾದ ಬಣಗಳು ಸೃಷ್ಟಿಯಾಗಿದ್ದವು.
ಕಾಂಗ್ರೆಸ್ ಭಿನ್ನಮತ ಹೇಳಿಕೆಗಳನ್ನು ಗಮನಿಸಿದ ಹೈಕಮಾಂಡ್, ಯಾರೂ ಕೂಡ ಬಹಿರಂಗ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿತ್ತು. ಅದರಂತೆ ಸಚಿವರು ಕೆಲ ದಿನಗಳ ಕಾಲ ಸುಮ್ಮನಾಗಿದ್ದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಚಿವರಿಗೆ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಿದ್ದ ಔತಣಕೂಟಕ್ಕೂ ಹೈಕಮಾಂಡ್ ಬ್ರೇಕ್ ಹಾಕಿತ್ತು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಹೈಕಮಾಂಡ್ ಮೇಲೆ ಒತ್ತಡ ಹೇರಿ ಔತಣಕೂಟ ರದ್ದಾಗುವಂತೆ ನೋಡಿಕೊಂಡಿದ್ದರು ಎಂದು ಸಿಎಂ ಆಪ್ತ ವಲಯದ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರು ಆಕಾಂಕ್ಷಿಗಳಾಗಿ ಬಿಂಬಿಸಿಕೊಂಡಿದ್ದರು.
ಉದಯಪುರ ಕಾಂಗ್ರೆಸ್ ಅಧಿವೇಶನದ ಘೋಷಣೆಯಂತೆ ʼಒಬ್ಬ ವ್ಯಕ್ತಿ ಒಂದು ಹುದ್ದೆʼ ಯನ್ನು ಜಾರಿ ಮಾಡಬೇಕು ಎಂದು ಅಸಮಾಧಾನಿತ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಸಿಎಂ ಆಪ್ತ ಸಚಿವರ ಇರಾದೆಯಾಗಿತ್ತು.
ಸಮಾವೇಶ ನಡೆಸುವ ಕುರಿತು ಚರ್ಚೆ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸಮಾವೇಶ ನಡೆಸುವ ಕುರಿತಂತೆ ಚರ್ಚಿಸಲು ಸಚಿವರಾದ ಕೆ.ಎನ್. ರಾಜಣ್ಣ, ಸತೀಶ ಜಾರಕಿಹೊಳಿ, ಜಿ. ಪರಮೇಶ್ವರ, ಎಚ್.ಸಿ.ಮಹದೇವಪ್ಪ ತೀರ್ಮಾನಿಸಿದ್ದು, ಈ ಕುರಿತಂತೆ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಸಮಾವೇಶದ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿಲ್ಲ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಎಐಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದೇನೆ' ಎಂದು ಹೇಳಿದ್ದಾರೆ.
ಡಿಕೆಶಿ ವಿರುದ್ಧ ಲಿಖಿತ ದೂರು
ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶದ ಕುರಿತು ಚರ್ಚಿಸಲು ಏರ್ಪಡಿಸಿದ್ದ ಔತಣಕೂಟ ತಡೆಯಲು ಕಾರಣರಾದ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಹೈಕಮಾಂಡ್‌ಗೆ ದೂರು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ ಭೇಟಿಯ ಬೆನ್ನಲ್ಲೇ ಸಚಿವರಾದ ಜಿ.ಪರಮೇಶ್ವರ ಮತ್ತು ಎಚ್.ಸಿ. ಮಹದೇವಪ್ಪ ಅವರು ಬುಧವಾರ ಸಂಜೆ ದೆಹಲಿಗೆ ತೆರಳಿ, ಸಹೋದ್ಯೋಗಿ ಸಚಿವರನ್ನು ಸೇರಲಿದ್ದಾರೆ. ರಾಜಣ್ಣ ಅವರು ಈ ವೇಳೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಲಿಖಿತ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಚಿವರ ದೆಹಲಿ ಯಾತ್ರೆ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು, ಸಚಿವರು ತಮ್ಮ ಇಲಾಖೆಗೆ ಸಂಬಂಧಿಸಿ ಕೆಲಸ ಕಾರ್ಯಗಳಿಗಾಗಿ ದೆಹಲಿಗೆ ತೆರಳಿದ್ದಾರೆ. ದೆಹಲಿ ಭೇಟಿಯ ವೇಳೆ ಸಹಜವಾಗಿ ಪಕ್ಷದ ಅಧ್ಯಕ್ಷರ ಜೊತೆ ಮಾತುಕತೆ ನಡೆಸುವುದು ಸಾಮಾನ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವರು ಕೂಡ ಪಕ್ಷದ ಚೌಕಟ್ಟಿನಲ್ಲಿ ಮಾತುಕತೆ ನಡೆಸಬೇಕು ಎಂದು ಹೇಳಿದರು.
ಈ ನಡುವೆ ಕಲಬುರ್ಗಿಯಲ್ಲಿ ಬುಧವಾರ ಬೆಳಿಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳನ್ನು ಬದಲಾಯಿಸುವ ಅಗತ್ಯವಿದ್ದರೆ ಅದನ್ನು ಮಾಡಲಾಗುವುದು. ಎಲ್ಲೆಲ್ಲಿ ಹಾಲಿ ಇರುವ ಪದಾಧಿಕಾರಿಗಳ ಅವಧಿ ಮುಕ್ತಾಯವಾಗಿದೆ, ಅಂತಹ ಕಡೆ ಹೊಸಬರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಕೋಕ್ ಕೊಡುವ ಸೂಚನೆಯನ್ನು ಪಕ್ಷದ ಹೈಕಮಾಂಡ್ ರವಾನಿಸಿದೆ ಎನ್ನಲಾಗುತ್ತಿದೆ.