ಬರ ಪರಿಹಾರ | ಪೂರ್ಣ ಬಿಡುಗಡೆಗೆ ಒತ್ತಾಯಿಸಿ ನಾಳೆ ವಿಧಾನಸೌಧದ ಎದುರು ಕಾಂಗ್ರೆಸ್‌ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ(ಏ.28) ಪ್ರತಿಭಟನೆ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Update: 2024-04-27 14:39 GMT

ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋದ ಬಳಿಕ, ಕೇಂದ್ರ ಸರ್ಕಾರ 3,454 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ, ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಬರಬೇಕಾದ 18,172 ರೂ.ಗಳನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ಪ್ರತಿಭಟನೆಗೆ ಮುಂದಾಗಿದೆ.

ಬರ ಪರಿಹಾರ ಬಾಕಿ, ತೆರಿಗೆ ಪಾಲು ಬಾಕಿ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ಚುನಾವಣಾ ಸಂದರ್ಭದಲ್ಲಿ ಇದೇ ವಿಚಾರವನ್ನು ಮುಂದಿಟ್ಟು ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿಸುತ್ತಿದೆ.

ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ 18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ (ಏ.28) ಪ್ರತಿಭಟನೆ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

ಬಾಗಲಕೋಟೆಯ ರಬಕವಿ ಬನಹಟ್ಟಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ್‌ ಪರ ಪ್ರಚಾರದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಳಿಕ 3454 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಪೂರ್ಣ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಮಾಡುವವರೆಗೂ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಯಲಿದೆ. ಜೊತೆಗೆ ಭಾನುವಾರ ವಿಧಾನಸೌಧದ ಮುಂದೆ ಹಮ್ಮಿಕೊಂಡಿರುವ ಪಕ್ಷದ ಪ್ರತಿಭಟನೆಯಲ್ಲಿ ನಾನು, ಉಪಮುಖ್ಯಮಂತ್ರಿ, ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದೇವೆ” ಎಂದು ತಿಳಿಸಿದ್ದಾರೆ.

ಈ ನಡುವೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೂಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಪೂರ್ಣಪ್ರಮಾಣದ ಪರಿಹಾರ ಬರುವರೆಗೆ ಕಾನೂನು ಹೋರಾಟ ಮತ್ತು ಬೀದಿ ಹೋರಾಟ ಮುಂದುವರಿಯಲಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ಹೋರಾಟ ಕೂಡ ಅಬಾಧಿತ ಎಂದಿದ್ದಾರೆ.

Tags:    

Similar News