ಬರ ಪರಿಹಾರ | ಮಾದರಿ ನೀತಿ ಸಂಹಿತೆ ವಿನಾಯಿತಿಗೆ ಸಚಿವ ಪ್ರಿಯಾಂಕ ಖರ್ಗೆ ಮನವಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಸಹ ಇನ್ನು ಸುಧಾರಣೆ ಕಂಡಿಲ್ಲ. ಈ ನಡುವೆ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳಲು ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಸಚಿವ ಪ್ರಿಯಾಂಕ ಖರ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.;

Update: 2024-05-10 10:39 GMT
ಬರ

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿಲ್ಲ, ಬರ ಪರಿಸ್ಥಿತಿ ಸಹ ಇನ್ನೂ ಸುಧಾರಣೆ ಕಂಡಿಲ್ಲ. ಈ ನಡುವೆ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳಲು ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಸಚಿವ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ರಾಜ್ಯದಲ್ಲಿ ಈಗಾಗಲೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಮುಂದುವರಿದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ, ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿರುತ್ತದೆ. ಮುಂದಿನ ಎರಡು ತಿಂಗಳವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧವಾದ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅತ್ಯವಶ್ಯಕವಾಗಿರುತ್ತದೆ. ಹೀಗಾಗಿ, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಇಲಾಖೆಯ ಸಚಿವರಿಗೆ ಅನುಮತಿ ನೀಡಬೇಕು. ಈ ಸಂಬಂಧ ಸಭೆ ಹಾಗೂ ಸಭೆಯ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.


ಏನಿದು ಮಾದರಿ ನೀತಿ ಸಂಹಿತೆ ?

ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಚುನಾವಣಾ ಆಯೋಗಗಳು ಚುನಾವಣೆ ದಿನಾಂಕ ಘೋಷಣೆಯಾದ ಸಂದರ್ಭದಿಂದ ಚುನಾವಣಾ ಫಲಿತಾಂಶ ಪ್ರಕಟವಾಗುವ ವರೆಗೆ ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡುತ್ತವೆ. ಇದೀಗ ಲೋಕಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗಳು ಪೂರ್ಣಗೊಂಡಿದ್ದರೂ, ಜೂನ್ 4ರಂದು ಫಲಿತಾಂಶ ಪ್ರಕಟವಾಗುವ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.

ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ನಿಗದಿ ಮಾಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಒಂದೊಮ್ಮೆ ನಿಯಮ ಉಲ್ಲಂಘನೆ ಮಾಡಿದರೆ, ಆಯೋಗ ಕ್ರಮ ತೆಗೆದುಕೊಳ್ಳುತ್ತದೆ. ಚುನಾವಣೆ ಅವಧಿಯಲ್ಲಿ ಯಾವುದೇ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ ಎನ್ನುವುದು ಇದರಲ್ಲಿ ಪ್ರಮುಖವಾಗಿದೆ.

ಮುಂಗಾರು ತಡವಾಗುವ ಸಾಧ್ಯತೆ: ಐಎಂಡಿ

ಈ ಬಾರಿ ಮುಂಗಾರು ವಿಳಂಬವಾಗುವ ಸಾಧ್ಯತೆ ಕಡಿಮೆ ಇದೆ. ಆದರೆ, ನಿಖರವಾದ ಮಾಹಿತಿಗಾಗಿ ಮೇ 15ರ ವರೆಗೆ ಕಾಯಬೇಕಾಗುತ್ತದೆ. ಈಗ ಪೂರ್ವ ಮುಂಗಾರು ಮಳೆ ಬರುತ್ತಿದ್ದು, ಮೇ ತಿಂಗಳ ಕೊನೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಬಗ್ಗೆ ಸ್ಪಷ್ಟವಾಗಿ ತಿಳಿಯಲಿದೆ. ಸಾಮಾನ್ಯವಾಗಿ ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ಪ್ರಾರಂಭದಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತದೆ. ಈಗ ಇರುವ ವಾತಾವರಣವನ್ನು ಗಮನಿಸಿದರೆ, ಮುಂಗಾರು ವಿಳಂಬವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಅಧಿಕಾರಿಗಳು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿದ್ದಾರೆ.

Tags:    

Similar News