ಮಾದಕವಸ್ತು ಪತ್ತೆ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಜುಲೈ 30ಕ್ಕೆ ಪ್ರತಿಭಟನೆ

ಇಂತಹ ಕೃತ್ಯಗಳಲ್ಲಿ ಬೇರೆ ಯಾರೂ ಭಾಗವಹಿಸದಂತೆ ನೋಡಿಕೊಳ್ಳಬೇಕಿದೆ. ಈ ಪ್ರಕರಣದಲ್ಲಿ ಕೈ ಜೋಡಿಸಿದ ಅಧಿಕಾರಿ, ಕುಮ್ಮಕ್ಕು ಕೊಡುವ ರಾಜಕಾರಣಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಧೀರಜ್‌ ಮುನಿರಾಜು ಒತ್ತಾಯಿಸಿದರು.;

Update: 2025-07-29 14:20 GMT
ಶಾಸಕ ಧೀರಜ್‌ ಮುನಿರಾಜು 

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬೈ ಪೊಲೀಸರು ಬೃಹತ್ ಮಾದಕವಸ್ತು ತಯಾರಿಕಾ ಘಟಕವನ್ನು ಪತ್ತೆಹಚ್ಚಿದ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ರಾಜ್ಯ ಪೊಲೀಸ್ ಇಲಾಖೆ ಮತ್ತು ಗುಪ್ತಚರ ಇಲಾಖೆಯ ಸಂಪೂರ್ಣ ವೈಫಲ್ಯ ಎಂದು ಆರೋಪಿಸಿರುವ ಬಿಜೆಪಿ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದೆ.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ರಾಜ್ಯದಲ್ಲಿ ಮಾದಕವಸ್ತು ಜಾಲ ವ್ಯಾಪಕವಾಗಿ ಹರಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. "ಈ ಹಿಂದೆ ಕಲಬುರಗಿಯಲ್ಲಿ ಮಹಾರಾಷ್ಟ್ರ ಪೊಲೀಸರು ಡ್ರಗ್ಸ್ ಜಾಲವನ್ನು ಭೇದಿಸಿದ್ದರು, ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲೇ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸ್ಪಷ್ಟ ನಿದರ್ಶನ" ಎಂದು ಅವರು ವಾಗ್ದಾಳಿ ನಡೆಸಿದರು.

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 1,300 ಕೋಟಿ ರೂ. ಮೌಲ್ಯದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಆದರೂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ. 'ಡ್ರಗ್ ಫ್ರೀ ಕರ್ನಾಟಕ' ಎಂಬ ಆ್ಯಪ್ ಅನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೊಳಿಸಲಾಗಿದ್ದು, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಟೀಕಿಸಿದರು.

ನಾಳೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಸರ್ಕಾರದ ಈ ವೈಫಲ್ಯವನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ (ಜುಲೈ 30) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಧೀರಜ್ ಮುನಿರಾಜು ಘೋಷಿಸಿದರು. "ಮಾದಕವಸ್ತು ಜಾಲಕ್ಕೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ, ಯುವ ಮೋರ್ಚಾದ ಹೋರಾಟವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು" ಎಂದು ಅವರು ಎಚ್ಚರಿಕೆ ನೀಡಿದರು.

ಈ ಪ್ರಕರಣವು ರಾಜ್ಯದ ಆಂತರಿಕ ಭದ್ರತೆ ಮತ್ತು ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. 

Tags:    

Similar News