ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಅಧಿಕಾರಿಗಳ ಇಲಾಖಾ ತನಿಖೆ ಶಿಫಾರಸು ತಿರಸ್ಕರಿಸಿದ ಸರ್ಕಾರ

ಆತ್ಮಹತ್ಯೆಗೂ ಮುನ್ನ ಗಣಪತಿ ಅವರು ಸ್ಥಳೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣವ್ ಮೊಹಾಂತಿ ಅವರಿಂದ ಕಿರುಕುಳವಾಗುತ್ತಿದೆ ಎಂದು ಆರೋಪಿಸಿದ್ದರು.

Update: 2025-09-25 09:49 GMT

ತೀವ್ರ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಭಾಗಶಃ ಅಂಗೀಕರಿಸಿದೆ. ಆದರೆ, ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮೊಹಾಂತಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕೆಂಬ ಆಯೋಗದ ಪ್ರಮುಖ ಶಿಫಾರಸನ್ನು ತಿರಸ್ಕರಿಸಲು ನಿರ್ಧರಿಸಿದೆ.

2016ರ ಜುಲೈ 7ರಂದು ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿಯಾಗಿದ್ದ ಎಂ.ಕೆ. ಗಣಪತಿ ಅವರು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಅವರು ಸ್ಥಳೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣವ್ ಮೊಹಾಂತಿ ಅವರಿಂದ ಕಿರುಕುಳವಾಗುತ್ತಿದೆ ಎಂದು ಆರೋಪಿಸಿದ್ದರು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣದ ತನಿಖೆ ನಡೆಸಲು, ಅಂದಿನ ಸರ್ಕಾರವು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು. ಆಯೋಗವು 2018ರ ಫೆಬ್ರವರಿಯಲ್ಲಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ವರದಿಯಲ್ಲಿ, ಕೆ.ಜೆ. ಜಾರ್ಜ್ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳು ಗಣಪತಿಯವರ ಆತ್ಮಹತ್ಯೆಗೆ ಕಾರಣರಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ, ತನಿಖಾ ಕ್ರಮದಲ್ಲಿ ಕೆಲವು ಲೋಪದೋಷಗಳಿವೆ ಎಂದು ಉಲ್ಲೇಖಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿತ್ತು.

ಶಿಫಾರಸು ತಿರಸ್ಕಾರಕ್ಕೆ ಕಾರಣ

ಕೇಶವನಾರಾಯಣ ಆಯೋಗದ ವರದಿಯನ್ನು ಅಧ್ಯಯನ ಮಾಡಲು, ಸರ್ಕಾರವು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಂ.ಕೆ. ಶ್ರೀವಾಸ್ತವ್ ಅವರನ್ನು ನೇಮಿಸಿತ್ತು. ಶ್ರೀವಾಸ್ತವ್ ಅವರು 2025ರ ಮೇ 27ರಂದು ತಮ್ಮ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು.

"ಈ ಪ್ರಕರಣವನ್ನು ಈಗಾಗಲೇ ಸಿಬಿಐ ತನಿಖೆ ನಡೆಸಿದ್ದು, ಅದರ ವರದಿಯನ್ನು ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎತ್ತಿಹಿಡಿದಿವೆ. ಹಾಗಾಗಿ, ಅಧಿಕಾರಿಗಳ ವಿರುದ್ಧ ಮರು ಇಲಾಖಾ ವಿಚಾರಣೆ ನಡೆಸುವ ಅಗತ್ಯವಿಲ್ಲ" ಎಂದು ಶ್ರೀವಾಸ್ತವ್ ತಮ್ಮ ವರದಿಯಲ್ಲಿ ಶಿಫಾರಸು ಮಾಡಿದ್ದರು. ಈ ಅಧ್ಯಯನ ವರದಿಯನ್ನು ಆಧರಿಸಿ, ರಾಜ್ಯ ಸಚಿವ ಸಂಪುಟವು ಕೇಶವನಾರಾಯಣ ಆಯೋಗದ ಇಲಾಖಾ ತನಿಖೆಯ ಶಿಫಾರಸನ್ನು ತಿರಸ್ಕರಿಸುವ ಅಂತಿಮ ತೀರ್ಮಾನವನ್ನು ಕೈಗೊಂಡಿದೆ ಎಂದು ಒಳಾಡಳಿತ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

Tags:    

Similar News